ನೆಲ್ಯಾಡಿ: ಕೆಲ ದಿನಗಳ ಹಿಂದೆ ವಿಷ ಪದಾರ್ಥ ಸೇವಿಸಿ ತೀವ್ರ ಅಸ್ವಸ್ಥಗೊಂಡು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಇಚ್ಲಂಪಾಡಿಯ ಮಹಿಳೆಯೋರ್ವರು ಚಿಕಿತ್ಸೆಗೆ ಸ್ಪಂದಿಸದೆ ನ.11ರಂದು ರಾತ್ರಿ ನಿಧನರಾಗಿದ್ದಾರೆ.
ಇಚ್ಚಂಪಾಡಿ ಗ್ರಾಮದ ನಿಡ್ಯಡ್ಕ ನಿವಾಸಿ ವೆಂಕಟೇಶ್ ಎಂಬವರ ಪತ್ನಿ ಸೌಮ್ಯ (36) ಮೃತಪಟ್ಟವರು.
ಗೋಳಿಯಡ್ಕದ ಬೀಜದ ಫ್ಯಾಕ್ಟರಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದ ಸೌಮ್ಯ ನ.9 ರಂದು ಸಂಜೆ ಮನೆಯಲ್ಲಿ ವಿಷ ಪದಾರ್ಥ ಸೇವಿಸಿ ತೀವ್ರ ಅಸ್ವಸ್ಥಗೊಂಡಿದ್ದರು. ಸೌಮ್ಯ ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡ ಬೆನ್ನಲ್ಲೇ ಆಕೆಯ ಪತಿ ವೆಂಕಟೇಶ್ ಸಹ ಇಲಿ ಪಾಷಾಣ ಸೇವಿಸಿದ್ದರು ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ಸ್ಥಳೀಯರು ಇಬ್ಬರನ್ನೂ ಕಡಬ ಸಮುದಾಯ ಆಸ್ಪತ್ರೆಗೆ ಕರೆತಂದು ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿನ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಈ ಪೈಕಿ ಸೌಮ್ಯ ತೀವ್ರ ಅಸ್ವಸ್ಥಗೊಂಡಿದ್ದ ಹಿನ್ನೆಲೆಯಲ್ಲಿ ಆಕೆಯನ್ನು ನ.10 ರಂದು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಅವರು ನ.11ರಂದು ರಾತ್ರಿ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.
ಸೌಮ್ಯ ಮೃತಪಟ್ಟಿರುವ ಸುದ್ದಿ ತಿಳಿಯುತ್ತಿದ್ದಂತೆ ಇತ್ತ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಆಕೆಯ ಪತಿ ವೆಂಕಟೇಶ್ ಅಲ್ಲಿಂದ ನ.12ರಂದು ಎಸ್ಕೇಪ್ ಆಗಿದ್ದ ಎಂದು ಹೇಳಲಾಗಿದೆ. ಈ ವಿಚಾರ ತಿಳಿಯುತ್ತಿದ್ದಂತೆ ಅಲ್ಲಿನ ವೈದ್ಯರು ಪುತ್ತೂರು ನಗರ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಅಲ್ಲಿಂದ ಉಪ್ಪಿನಂಗಡಿ ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು.
ತಮಿಳುನಾಡಿಗೆ ಪರಾರಿಯಾಗುವ ನಿಟ್ಟಿನಲ್ಲಿ ವೆಂಕಟೇಶ್ ಮಂಗಳೂರು ರೈಲ್ವೆ ನಿಲ್ದಾಣಕ್ಕೆ ತೆರಳಿರುವ ಕುರಿತು ಮಾಹಿತಿ ಪಡೆದುಕೊಂಡ ಉಪ್ಪಿನಂಗಡಿ ಪೊಲೀಸರು ವೆಂಕಟೇಶ್ ನನ್ನು ಅಲ್ಲಿಂದ ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.