ಪುತ್ತೂರು: ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಸದಸ್ಯರ ಆಯ್ಕೆಗೆ ಡಿ.10 ರಂದು ಚುನಾವಣೆ ನಡೆಯುತ್ತಿದ್ದು, ಬೆಳಿಗ್ಗೆ 8 ಗಂಟೆಗೆ ಮತದಾನ ಪ್ರಕ್ರಿಯೆ ಆರಂಭಗೊಂಡಿದೆ.
ಪುತ್ತೂರು ಶಾಸಕರಾದ ಸಂಜೀವ ಮಠಂದೂರು ರವರು ಬಿಜೆಪಿಯಿಂದ ಆಯ್ಕೆಯಾದ ನಗರಸಭಾ ಸದಸ್ಯರೊಂದಿಗೆ ಆಗಮಿಸಿ ನಗರಸಭಾ ಸಭಾಂಗಣದ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.
ದ.ಕ.ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕಾಂಗ್ರೆಸ್ ಅಭ್ಯರ್ಥಿಯಾಗಿ ಸಹ್ಯಾದ್ರಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಮಂಜುನಾಥ ಭಂಡಾರಿ ಹಾಗೂ ಎಸ್‌ಡಿಪಿಐ ಅಭ್ಯರ್ಥಿಯಾಗಿ ಪಕ್ಷದ ರಾಜ್ಯ ಕಾರ್ಯದರ್ಶಿ ಶಾಫಿ ಬೆಳ್ಳಾರೆ ಅಂತಿಮವಾಗಿ ಕಣದಲ್ಲಿದ್ದಾರೆ.
ಗ್ರಾ.ಪಂ, ಪಟ್ಟಣ ಪಂಚಾಯತ್, ನಗರ ಪಂಚಾಯತ್, ನಗರಸಭೆ, ನಗರ ಪಾಲಿಕೆ, ಮಹಾನಗರ ಪಾಲಿಕೆಗಳ ಸದಸ್ಯರು, ಶಾಸಕರು ಹಾಗೂ ಸಂಸದರು ವಿಧಾನ ಪರಿಷತ್ ಚುನಾವಣೆಯ ಮತದಾರರಾಗಿರುತ್ತಾರೆ.