ವಿಟ್ಲ: ಪಟ್ಟಣ ಪಂಚಾಯತ್ ಚುನಾವಣೆಯ ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಈಗಾಗಲೇ ಬಿಜೆಪಿ ಪಾಳಯದಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ಇದೀಗ ಬೂತ್ ನ ಅಧ್ಯಕ್ಷ ಮತ್ತು ಕಾರ್ಯದರ್ಶಿ ರಾಜೀನಾಮೆ ನೀಡಲು ಸಿದ್ಧತೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಭಾರತೀಯ ಜನತಾ ಪಾರ್ಟಿಯ ಬೂತ್ ಸಂಖ್ಯೆ 12 ವಾರ್ಡ್ 7 ರ ವಾರ್ಡ್ ನ ಅಧ್ಯಕ್ಷ ಸ್ಥಾನಕ್ಕೆ ಪುರಂದರ ರವರು ಮತ್ತು ಕಾರ್ಯದರ್ಶಿ ಸ್ಥಾನಕ್ಕೆ ದಯಾನಂದ ರವರು ರಾಜೀನಾಮೆ ನೀಡಲು ಸಿದ್ಧತೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
‘ನಾನು ಬಿಜೆಪಿ ಪಕ್ಷದ ಸಕ್ರಿಯ ಸದಸ್ಯರಾಗಿ ಗುರುತಿಸಿಕೊಂಡಿದ್ದು, ಈ ಹಿಂದೆ 2016 ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವಲ್ಲಿ ಪ್ರಮುಖ ಪಾತ್ರ ವಹಿಸಿರುತ್ತೇನೆ. ಅಲ್ಲದೇ ಪಕ್ಷದ ಎಲ್ಲಾ ಕಾರ್ಯಕ್ರಮಗಳಲ್ಲೂ ತಪ್ಪದೆ ಭಾಗವಹಿಸಿದ್ದೇನೆ’.
‘2021 ರ ಚುನಾವಣೆಯಲ್ಲಿ ನಾನು ಕೂಡ ಅಕಾಂಕ್ಷಿಯಾಗಿದ್ದು,ಪಕ್ಷವು ನನ್ನನ್ನು ಕಡೆಗಣಿಸಿ ಹೊರನಾಡಿನ ವ್ಯಕ್ತಿಗೆ ಅವಕಾಶ ಮಾಡಿಕೊಟ್ಟಿರುತ್ತದೆ ಈ ನಿಟ್ಟಿನಲ್ಲಿ ವಾರ್ಡ್ ನ ಅಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡುತ್ತೇನೆ’ ಎಂದು ರಾಜೀನಾಮೆ ಪತ್ರದಲ್ಲಿ ಪುರಂದರ ರವರು ಉಲ್ಲೇಖಿಸಿದ್ದಾರೆ ಎನ್ನಲಾಗಿದೆ.
ಪುರಂದರ ರವರಿಗೆ ಪಕ್ಷದಿಂದ ಸ್ಪರ್ಧಿಸಲು ಟಿಕೆಟ್ ನೀಡದ ಹಿನ್ನೆಲೆಯಲ್ಲಿ ಕಾರ್ಯದರ್ಶಿ ಸ್ಥಾನಕ್ಕೆ ದಯಾನಂದ ರವರು ರಾಜೀನಾಮೆ ನೀಡಲು ಸಿದ್ಧತೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.