ದಕ್ಷಿಣ ಕನ್ನಡ ಸಂಸದ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಗುರುವಾರ ಕೇಂದ್ರ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ದಕ್ಷಿಣ ಕನ್ನಡ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಷಯಗಳ ಬಗ್ಗೆ ಚರ್ಚೆ ನಡೆಸಿದರು.
ಜ.10 ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಮಾರು ರೂ. 2555.88 ಕೋಟಿ ವೆಚ್ಚದ ವಿವಿಧ ಹೆದ್ದಾರಿ ಕಾಮಗಾರಿಗಳಿಗೆ ಶಿಲಾನ್ಯಾಸ ಹಾಗೂ ಕಾಮಗಾರಿಗಳ ಪುನರ್ ಚಾಲನೆ ನೀಡಲಿರುವ ಕಾರ್ಯಕ್ರಮದ ಬಗ್ಗೆ ಚರ್ಚಿಸಲಾಯಿತು. ಇದೇ ವೇಳೆ ಮಂಗಳೂರು ಬೆಂಗಳೂರು ನಡುವಿನ ಶಿರಾಡಿ ಘಾಟ್ ಸುರಂಗ ಮಾರ್ಗದ ಯೋಜನೆಯನ್ನು ಆದಷ್ಟು ಶೀಘ್ರದಲ್ಲಿ ಕೈಗೆತ್ತಿಕೊಳ್ಳುವಂತೆ ನಳಿನ್ ಕುಮಾರ್ ವಿನಂತಿಸಿದರು.
ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು ಜಿಲ್ಲೆಗೆ ಅನುಕೂಲವಾಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯನ್ನು ಆದಷ್ಟು ಬೇಗನೆ ಪೂರ್ಣಗೊಳಿಸಲು ಸಂಬಂಧಪಟ್ಟ ಇಲಾಖೆಗೆ ಸೂಚಿಸುವುದಾಗಿ ತಿಳಿಸಿದ್ದಾರೆ ಎಂದು ನಳಿನ್ ಕುಮಾರ್ ಕಟೀಲು ತಿಳಿಸಿದ್ದಾರೆ.