ವಿಟ್ಲ: ವಿಟ್ಟ ಪಟ್ಟಣ ಪಂಚಾಯತ್‌ನ 14 ಸ್ಥಾನಗಳಿಗೆ ಡಿ.27 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ ಮತದಾನದ ದಿನದಂದು ಸಾರ್ವಜನಿಕ ಶಾಂತಿಸುವ್ಯವಸ್ಥೆಯನ್ನು ಕಾಪಾಡುವ ಮೂಲಕ ಮುಕ್ತ ಮತ್ತು ನ್ಯಾಯಯುತ ಹಾಗೂ ದಕ್ಷಪಾತವಾಗಿ ಚುನಾವಣೆಯನ್ನು ನಡೆಸುವ ನಿಟ್ಟಿನಲ್ಲಿ ಭಾರತೀಯ ದಂಡ ಪ್ರಕ್ರಿಯೆ ಸಂಹಿತೆ 1973ರ ಕಲಂ 144 ರನ್ವಯ ಡಿ.26ರ ರಾತ್ರಿ 9 ಗಂಟೆಯಿಂದ ಮತದಾನ ಪ್ರಕ್ರಿಯೆ ಮುಕ್ತಾಯವಾಗುವವರೆಗೆ ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯ ಒಟ್ಟು 40 ಮತದಾನ ಕೇಂದ್ರಗಳ ಸುತ್ತಮುತ್ತ 100 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ಆದೇಶಿಸಿದ್ದಾರೆ.
ಮತಗಟ್ಟೆ ವ್ಯಾಪ್ತಿಯಲ್ಲಿ 5ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ ಅಥವಾ ಸಭೆ, ಸಮಾರಂಭಗಳನ್ನು ನಿಷೇಧಿಸಲಾಗಿದೆ. ನಿಷೇಧಿತ 100 ಮಿಟರ್ ವ್ಯಾಪ್ತಿಯಲ್ಲಿ ಮತದಾರರು ಮತ್ತು ಸಾರ್ವಜನಿಕರು ಚುನಾವಣಾ ಪ್ರಚಾರ ಮಾಡುವುದನ್ನು ಹಾಗೂ ಮತದಾನಕ್ಕೆ ಭಾಧಕವಾಗುವ ಯಾವುದೇ ಚಟುವಟಿಕೆಗಳನ್ನು ನಿರ್ಬಂಧಿಸಲಾಗಿದೆ.
ಮತಗಟ್ಟೆ ಕೇಂದ್ರಗಳ 10 ಮೀಟರ್ ವ್ಯಾಪ್ತಿಯಲ್ಲಿ ಸಂಚಾರಿ ದೂರವಾಣಿ ಮೊಬೈಲ್ ಬಳಕೆಯನ್ನು ಹಾಗೂ ಮತಗಟ್ಟೆ ಕೇಂದ್ರಗಳ 100 ಮೀಟರ್ ವ್ಯಾಪ್ತಿಯಲ್ಲಿ ಧ್ವನಿವರ್ಧಕ ಬಳಕೆಯನ್ನು ನಿಷೇಧಿಸಲಾಗಿದೆ.
ಈ ನಿಷೇಧಾಜ್ಞೆಯು ಸರ್ಕಾರದ ಅಧಿಕಾರಿಗಳಿಗೆ ಹಾಗೂ ಮತಗಟ್ಟೆ ಅಧಿಕಾರಿಗಳಿಗೆ ಅನ್ವಯಿಸುವುದಿಲ್ಲ. ಯಾವುದೇ ಆಯುಧ, ಕುಡುಗೋಲು, ಖಡ್ಗ ಭರ್ಚಿ, ಚೂರಿ, ದೊಡ್ಡ ಲಾರಿ ಅಥವಾ ದೈಹಿಕ ದಂಡನೆಗೆ ಕಾರಣವಾಗುವ ಅಥವಾ ಪೂರಕವಾಗುವ ಇನ್ಯಾವುದೇ ವಸ್ತುಗಳನ್ನು ಹೊಂದುವುದನ್ನು ಮತ್ತು ಸಾಗಾಟ ಮಾಡುವುದನ್ನು ನಿರ್ಬಂಧಿಸಲಾಗಿದೆ.
ಯಾವುದೇ ಕ್ಷಾರಕ ಅಥವಾ ಸ್ಫೋಟಕ ವಸ್ತುಗಳನ್ನು ಹೊಂದುವುದನ್ನು ಹಾಗೂ ಸಾಗಾಟ ಮಾಡುವುದನ್ನು ನಿಷೇಧಿಸಲಾಗಿದೆ. ಸಹಾಯಕ ಚುನಾವಣಾ ಅಧಿಕಾರಿಗಳಿಂದ ಪೂರ್ವಾನುಮತಿ ಪಡೆಯದೆ, ಯಾವುದೇ ರೀತಿಯ ಸಾರ್ವಜನಿಕ ಮರವಣಿಗೆ, ಸಾರ್ವಜನಿಕ ಸಭೆ ಸಮಾರಂಭಗಳನ್ನು ನಡೆಸಬಾರದು ಎಂದು ಆದೇಶಿಸಿದ್ದಾರೆ.
ಡಿ. 25 ರ ಸಂಜೆ 5 ಗಂಟೆಯಿಂದ ಡಿ.27 ರ ಸಂಜೆ 5 ಗಂಟೆಯವರೆಗೆ ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಎಲ್ಲಾ ವಿಧದ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ. ಪ್ರಜಾ ಪ್ರತಿನಿಧಿ ಕಾಯ್ದೆ-1951 ಸೆಕ್ಷನ್ 135(ಸಿ) ರನ್ವಯ ಹಾಗೂ ಕರ್ನಾಟಕ ಅಬಕಾರಿ ಸನ್ನದುಗಳ(ಸಾಮಾನ್ಯ ಷರತ್ತುಗಳು ನಿಯಮ 1967ರ ನಿಯಮ 10(ಬಿ) ರಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಎಲ್ಲಾ ಮದ್ಯದಂಗಡಿಗಳನ್ನು ಮುಚ್ಚುವಂತೆ ಹಾಗೂ ಅಬಕಾರಿ ಪದಾರ್ಥಗಳ ಸಾಗಾಣಿಕೆ, ಶೇಖರಣೆ, ತಯಾರಿಕ ಸರಬರಾಜು ಮತ್ತು ಎಲ್ಲಾ ವಿದಧ ಮದ್ಯ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ.