ವಿಟ್ಲ: ಕರಾವಳಿ ಜಿಲ್ಲೆಯ ಆರಾಧ್ಯ ಸ್ವಾಮಿ ಕೊರಗಜ್ಜ ದೈವಕ್ಕೆ ಅಪಮಾನವೆಸಗಿದ ಆರೋಪಿಗಳ ಬಂಧನವಾಗದ ಹಿನ್ನೆಲೆ ಜ.11ರ ಮಂಗಳವಾರ ದಂದು ಬೆಳಿಗ್ಗೆ 6ರಿಂದ ಮಧ್ಯಾಹ್ನ 12ರ ವರಗೆ ಸ್ವಯಂ ಪ್ರೇರಿತ “ವಿಟ್ಲ ಬಂದ್” ನಡೆಸಲು ಹಿಂದೂ ಜಾಗರಣ ವೇದಿಕೆ ಕರೆ ನೀಡಿದೆ. 10 ಗಂಟೆಗೆ ಪ್ರತಿಭಟನಾ ಸಭೆ ನಡೆಯಲಿದೆ ಎಂದು ಹಿಂದೂ ಜಾಗರಣ ವೇದಿಕೆ ಪ್ರಕಟಣೆಯಲ್ಲಿ ತಿಳಿಸಿದೆ.
ಕೊಳ್ನಾಡು ಗ್ರಾಮದ ಅಝೀಝ್ ಎಂಬವರ ಮಗಳ ಮದುವೆ ದಿನ ಈ ಘಟನೆ ನಡೆದಿದ್ದು, ಮಂಜೇಶ್ವರ ತಾಲೂಕಿನ ಉಪ್ಪಳದ ಯುವಕನ ಅಝೀಝ್ ಪುತ್ರಿಯ ವಿವಾಹ ಮಧ್ಯಾಹ್ನ ನಡೆದಿದ್ದು, ಅದೇ ದಿನ ರಾತ್ರಿ ಮುಸ್ಲಿಂ ಸಂಪ್ರದಾಯದಂತೆ ವರ ತನ್ನ 50ಕ್ಕೂ ಹೆಚ್ಚು ಸ್ನೇಹಿತರೊಂದಿಗೆ ವಧುವಿನ ಮನೆಗೆ (ತಾಳ) ಆಗಮಿಸಿದ್ದಾನೆ. ತಡರಾತ್ರಿ ಆಗಮಿಸಿದ ವರನ ಬಳಗ ವಧುವಿನ ಮನೆ ಮುಂದಿನ ರಸ್ತೆಯಲ್ಲಿ ಹಾಡು ಹೇಳಿ ಕುಣಿಯುತ್ತಾ ಬಂದಿದ್ದು, ತುಳುನಾಡಿನ ಆರಾಧ್ಯ ದೈವವಾದ ಕೊರಗಜ್ಜನ ವೇಷ ಭೂಷಣ ಧರಿಸಿ ತಲೆಗೆ ಅಡಿಕೆ ಹಾಳೆಯ ಟೋಪಿ ಹಾಕಿ ಮುಖಕ್ಕೆ ಮಸಿ ಬಳಿಕೊಂಡು ವರ ಆಗಮಿಸಿದ ವಿಡೀಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದು, ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆಯನ್ನುಂಟು ಮಾಡುವಂತಿದೆ ಎಂದು ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.