ಮಂಗಳೂರು: ಸಾರ್ವಜನಿಕ ಹಿತದೃಷ್ಟಿಯಿಂದ ಕೋವಿಡ್ ಸೋಂಕಿನ ಪ್ರಕರಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ವಿಪತ್ತು ನಿರ್ವಹಣಾ ಕಾಯ್ದೆಯಡಿ ಫೆಬ್ರವರಿ 15ರವರೆಗೆ ಕೋವಿಡ್ ನಿಯಂತ್ರಣ ಮಾರ್ಗಸೂಚಿಯನ್ನು ಜಾರಿಗೊಳಿಸಿ ಜಿಲ್ಲಾದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ ವಿ ಅವರು ಆದೇಶಿಸಿದ್ದಾರೆ.
ಜಿಲ್ಲೆಯಾದ್ಯಂತ ಜನವರಿ 31ರಿಂದ ಜಾರಿಗೆ ಬರುವಂತೆ ಪ್ರತಿ ರಾತ್ರಿ 10ರಿಂದ ಬೆಳಿಗ್ಗೆ 5 ಗಂಟೆಯವರೆಗೆ ವಿಧಿಸಲಾಗಿದ್ದ ರಾತ್ರಿ ಕರ್ಫ್ಯೂವನ್ನು ಹಿಂಪಡೆಯಲಾಗಿದೆ.
2 ಡೋಸ್ ಲಸಿಕೆ ಪಡೆದ ವ್ಯಕ್ತಿಗಳಿಗೆ ಮಾತ್ರ ಪಬ್, ಕ್ಲಬ್, ಬಾರ್, ರೆಸ್ಟೋರೆಂಟ್, ಹೋಟೆಲ್ ಗಳು ಹಾಗೂ ಹೋಟೆಲ್ ಗಳಲ್ಲಿ ತಿನ್ನುವ ಸ್ಥಳಗಳಿಗೆ ಶೇ. 100 ರಷ್ಟು ಆಸನ ವ್ಯವಸ್ಥೆಗೆ ಅನುಮತಿ ನೀಡಲಾಗಿದೆ. ರಾಜ್ಯ ಸರ್ಕಾರದ ಚಾಲ್ತಿಯಲ್ಲಿರುವ ಮಾರ್ಗಸೂಚಿಯಂತೆ ಮದುವೆ ಸಮಾರಂಭಗಳಿಗೆ ತೆರೆದ ಸ್ಥಳದಲ್ಲಿ 300 ಜನರಿಗೆ ಮತ್ತು ಒಳಾಂಗಣದಲ್ಲಿ 200 ಜನರಿಗೆ ಅವಕಾಶವನ್ನು ಕಲ್ಪಿಸಲಾಗಿದೆ. ಚಿತ್ರಮಂದಿರ, ಮಲ್ಟಿಪ್ಲೆಕ್ಸ್, ರಂಗಮಂದಿರ, ಸಭಾಭವನಗಳಲ್ಲಿ ಶೇಕಡ 50 ರಷ್ಟು ಸೀಟು ಭರ್ತಿಗೆ ಅವಕಾಶ ನೀಡಲಾಗಿದೆ.
ದೇವಾಲಯಗಳಲ್ಲಿ ದರ್ಶನ ಮತ್ತು ಸೇವೆಗೆ ಅವಕಾಶ ಒಮ್ಮೆಗೆ 50 ಜನರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಧರಣಿ, ಸಮಾವೇಶ, ಸಾಮಾಜಿಕ, ಧಾರ್ಮಿಕ ಮತ್ತು ರಾಜಕೀಯ ಕಾರ್ಯಕ್ರಮಗಳನ್ನು ನಿರ್ಬಂಧಿಸಲಾಗಿದೆ. ಕ್ರೀಡಾ ಸಂಕೀರ್ಣ, ಸ್ಟೇಡಿಯಂ, ಈಜುಕೊಳ ಮತ್ತು ಜಿಮ್ ಗಳಲ್ಲಿ ಶೇಕಡ 50 ರಷ್ಟು ಮಂದಿಗೆ ಮಾತ್ರ ಅವಕಾಶ ನೀಡಲಾಗಿದೆ. ಸರ್ಕಾರಿ ಕಚೇರಿಗಳಲ್ಲಿ ಶೇಕಡ 100 ರಷ್ಟು ಎಲ್ಲಾ ನೌಕರರು ಕಡ್ಡಾಯವಾಗಿ ಹಾಜರಾಗಿ ಕಾರ್ಯನಿರ್ವಹಿಸುವಂತೆ ಸೂಚಿಸಲಾಗಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸರ್ಕಾರ ಹೊರಡಿಸಿದ ಮಾರ್ಗಸೂಚಿಗಳನ್ವಯ ಕೇರಳ ರಾಜ್ಯದಿಂದ ಜಿಲ್ಲೆಗೆ ಪ್ರವೇಶ ಕಲ್ಪಿಸುವ ಗಡಿಭಾಗಗಳಲ್ಲಿ ಈಗಾಗಲೇ ನಿರ್ಮಿಸಲಾಗಿರುವ ಚೆಕ್ ಪೋಸ್ಟ್ ಗಳಲ್ಲಿ ತೀವ್ರ ಕಣ್ಗಾವಲು ಮತ್ತು ತಪಾಸಣೆ ಕಾರ್ಯವನ್ನು ನಡೆಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.