ಬೆಂಗಳೂರು: ರಾಜ್ಯ ಸರ್ಕಾರದ ಆದೇಶವನ್ನು ಉಲ್ಲಂಘಿಸಿ, ಅನಧಿಕೃತವಾಗಿ 1 ರಿಂದ 5ನೇ ತರಗತಿಗಳನ್ನು ನಡೆಸುತ್ತಿರುವ ಶಾಲೆಗಳ, ಶಿಕ್ಷಣ ಸಂಸ್ಥೆಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್ ಸುರೇಶ್‌ಕುಮಾರ್ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆಯ ರಾಜ್ಯ ಕೋವಿಡ್ 19 ತಾಂತ್ರಿಕ ಸಲಹಾ ಸಮಿತಿಯ ಅನುಮತಿಯೊಂದಿಗೆ 6ನೇ ತರಗತಿಯಿಂದ ಮೇಲ್ಪಟ್ಟ ತರಗತಿಗಳನ್ನು ಮಾತ್ರ ಆರಂಭಿಸಲು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಅನುಮತಿ ನೀಡಿದೆ. ಆದರೆ ರಾಜ್ಯದ ಹಲವೆಡೆ ವರದಿಯಾಗುತ್ತಿರುವಂತೆ ಖಾಸಗಿ ಶಾಲೆಗಳು 1 ರಿಂದ 5ನೇ ತರಗತಿಗಳನ್ನು ಅನಧಿಕೃತವಾಗಿ ನಡೆಸುತ್ತಿರುವ ಕಡೆಗಳಲ್ಲಿ ಕ್ರಮ ಕೈಗೊಳ್ಳಬೇಕೆಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಮತ್ತೊಮ್ಮೆ ಕಠಿಣ ಆದೇಶ ಮಾಡಿದ್ದಾರೆ.
ಖಾಸಗಿ ಶಾಲೆಗಳನ್ನು ಪತ್ತೆ ಮಾಡಿ ಕಾನೂನು ಕ್ರಮಕೈಗೊಳ್ಳಲು ತಾಲೂಕು ಮಟ್ಟದಲ್ಲಿ ಪರಿಶೀಲನಾ ತಂಡಗಳನ್ನು ರಚಿಸಲು ಹಾಗೂ ಖಾಸಗಿ ಶಾಲೆಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ, ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಿಗೆ, ಕಲಬುರಗಿ ಹಾಗೂ ಧಾರವಾಡ ವಿಭಾಗದ ಆಯುಕ್ತರಿಗೆ ಸಚಿವರು ನಿರ್ದೇಶನ ನೀಡಿದ್ದಾರೆ.