ಮಂಗಳೂರು: ನಗರದ ರಾಷ್ಟ್ರೀಯ ಹೆದ್ದಾರಿ 66ರ ಎಕ್ಕೂರು ಬಳಿ ಇಂದು ಬೆಳ್ಳಂ ಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬೈಕ್ ಮತ್ತು ಲಾರಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿದ್ದಾನೆ.
ಮೃತ ಸವಾರನನ್ನು ಉಳ್ಳಾಲ ಕುಂಪಲದ ನಿವಾಸಿ ರವಿಕುಮಾರ್(62) ಎಂದು ಗುರುತಿಸಲಾಗಿದೆ.
ತೊಕ್ಕೊಟ್ಟು ಕಡೆಯಿಂದ ಮಂಗಳೂರಿಗೆ ಬರುತ್ತಿದ್ದ ದ್ವಿಚಕ್ರ ವಾಹನ ಸವಾರನಿಗೆ ಏಕಮುಖವಾಗಿಯೇ ಸಂಚರಿಸುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ.
ಡಿಕ್ಕಿ ರಭಸಕ್ಕೆ ಗಂಭೀರ ಗಾಯಗೊಂಡಿರುವ ದ್ವಿಚಕ್ರ ಸವಾರನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಸವಾರ ಸಾವನ್ನಪ್ಪಿದ್ದಾರೆ. ಡಿಕ್ಕಿ ಹೊಡೆದ ಲಾರಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ನಗರ ಸಂಚಾರಿ ಠಾಣಾ ಪೊಲೀಸರು ಆಗಮಿಸಿ ಪ್ರಕರಣ ದಾಖಲಿಸಿದ್ದಾರೆ. ರಸ್ತೆ ದುರಂತದಿಂದಾಗಿ ಅರ್ಧ ಗಂಟೆಗೂ ಅಧಿಕ ಕಾಲ ಸಂಚಾರ ಸ್ಥಗಿತಗೊಂಡಿತ್ತು. ಬಳಿಕ ಸಂಚಾರಿ ಪೊಲೀಸರು ಆಗಮಿಸಿ ವಾಹನ ತೆರವುಗೊಳಿಸಿದರು.