ನವದೆಹಲಿ: ದೇಶದ್ರೋಹದ ಕಾನೂನು ಪುನರ್‌ವಿಮರ್ಶೆ ಆಗುವವರೆಗೂ ಐಪಿಸಿ ಸೆಕ್ಷನ್ 124 ಎ ಕಾನೂನಿನಡಿ ಯಾವುದೇ ಹೊಸ ಎಫ್‌ಐಆರ್‌ಗಳನ್ನು ದಾಖಲಿಸದಂತೆ ಸುಪ್ರೀಂಕೋರ್ಟ್ ಮಹತ್ವದ ಆದೇಶ ನೀಡಿದೆ.
ದೇಶದ್ರೋಹ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ, ನ್ಯಾಯಮೂರ್ತಿ ಸೂರ್ಯಕಾಂತ್ ಹಾಗೂ ಹಿಮಾ ಕೊಹ್ಲಿ ಅವರಿದ್ದ ನ್ಯಾಯಪೀಠ, ಮಧ್ಯಂತರ ಆದೇಶ ನೀಡಿದೆ.
ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸುವವರೆಗೆ ಸರ್ಕಾರಗಳು ದೇಶದ್ರೋಹ ಪ್ರಕರಣವನ್ನು ಬಳಸಿಕೊಳ್ಳುವಂತಿಲ್ಲ. ಈಗಾಗಲೇ ದೇಶದ್ರೋಹ ಪ್ರಕರಣದಲ್ಲಿ ಜೈಲುಗಳಲ್ಲಿ ಇರುವವರು ಜಾಮೀನಿಗೆ ಅರ್ಜಿ ಸಲ್ಲಿಸಬಹುದು ಎಂದು ಪೀಠ ಹೇಳಿದೆ.
ದೇಶದ್ರೋಹ ಕಾನೂನಿನ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಜುಲೈಗೆ ಮುಂದೂಡಿಕೆ ಮಾಡಿದೆ.