ಬೆಂಗಳೂರು: ಶಿವಮೊಗ್ಗದ ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಹತ್ತು ಮಂದಿ ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಯನ್ನು 90 ದಿನಗಳಿಂದ 180 ದಿನಗಳಿಗೆ ಹೆಚ್ಚಿಸಬೇಕು ಎಂದು ರಾಷ್ಟ್ರೀಯ ತನಿಖಾ ದಳ(ಎನ್‌ಐಎ)ದ ಮನವಿಗೆ ವಿಶೇಷ ನ್ಯಾಯಾಲಯ ಅನುಮತಿ ನೀಡಿದೆ.
ಈ ಕುರಿತಂತೆ ಎನ್‌ಐಎ ಪರ ವಕೀಲರು ಸಲ್ಲಿಸಿದ ಮನವಿಯನ್ನು ಬುಧವಾರ ಎನ್‌ಐಎ ವಿಶೇಷ ನ್ಯಾಯಾಲಯ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಎನ್‌ಐಎ ಪರ ವಕೀಲರಾದ ಪಿ.ಪ್ರಸ ನ್ನಕುಮಾರ್, ಪ್ರಕರಣದಲ್ಲಿ ಈಗಾಗಲೇ ಆರೋಪಿಗಳ ಗುರುತು ಪತ್ತೆಯ ಪೆರೇಡ್ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಆದರೆ, ಪ್ರತ್ಯಕ್ಷ ಸಾಕ್ಷಿಗಳ ವಿಚಾರಣೆ ನಡೆಯಬೇಕಿದೆ.
ಹೀಗಾಗಿ ಆರೋಪಿಗಳು ಬಳಸುತ್ತಿದ್ದ ಎಲೆಕ್ಟ್ರಾನಿಕ್ ವಸ್ತುಗಳು ಮತ್ತು ಸಿಡಿಆರ್ ವಿಶ್ಲೇಷಣೆ ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ ಇನ್ನೂ ನಡೆಯಬೇಕಿದೆ. ಜತೆಗೆ ಹತ್ಯೆ ನಡೆಸಿ ಸಮಾಜದಲ್ಲಿ ಭಯದ ವಾತಾವರಣ ಸೃಷ್ಟಿಸಲು ಹಣಕಾಸಿನ ನೆರವು ಯಾರಿಂದ ಪಡೆಯಲಾಯಿತು ಎಂಬ ಬಗ್ಗೆ ಮಾಹಿತಿ ಸಂಗ್ರಹಿಸಬೇಕಿದೆ. ಹೀಗಾಗಿ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಿಸಬೇಕು ಎಂದು ಕೋರಿದರು. ಅದನ್ನು ಮಾನ್ಯ ಮಾಡಿದ ನ್ಯಾಯಾಧೀಶರು ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು 180 ದಿನಗಳಿಗೆ ವಿಸ್ತರಿಸಿ ಆದೇಶಿಸಿದರು.