ಬೆಂಗಳೂರು: ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸಿದ್ದ ಪಿಯುಸಿ ಪರೀಕ್ಷೆಗಳ ಫಲಿತಾಂಶವು ಜೂನ್ 3ನೇ ವಾರದಲ್ಲಿ ಪ್ರಕಟವಾಗಲಿದೆ.
ಮುಂದಿನ ವಾರದಿಂದಲೇ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಆರಂಭವಾಗಲಿದೆ ಎಂದು ಶಿಕ್ಷಣ ಇಲಾಖೆ ಸಚಿವ ಬಿ.ಸಿ.ನಾಗೇಶ್ ಟ್ವೀಟ್ ಮಾಡಿದ್ದಾರೆ. ಈಗಾಗಲೇ ಪಿಯುಸಿ ಪರೀಕ್ಷೆಗಳು ಸುಸೂತ್ರವಾಗಿ ಮುಗಿದಿವೆ ಎಂದು ಶಿಕ್ಷಣ ಸಚಿವರು ಹೇಳಿದ್ದಾರೆ. ಏಪ್ರಿಲ್ 22 ರಿಂದ ಮೇ 18ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆದಿದ್ದವು.
ರಾಜ್ಯದ 1,076 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆದಿದ್ದವು. ಈ ಬಾರಿಯ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ಹೆಚ್ಚುವರಿಯಾಗಿ 15 ನಿಮಿಷಗಳ ಕಾಲ ಪ್ರಶ್ನೆಪತ್ರಿಕೆಯನ್ನು ಓದುವ ಸಮಯವನ್ನೂ ನೀಡಲಾಗಿತ್ತು. ಒಟ್ಟಾರೆ 6,84,255 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. ಈ ಪೈಕಿ 3,46,936 ಬಾಲಕರು ಮತ್ತು 3,37,319 ಬಾಲಕಿಯರು. 6,00,519 ಸಾಮಾನ್ಯ ವಿದ್ಯಾರ್ಥಿಗಳಿದ್ದರೆ, 61,808 ಪುನರಾವರ್ತಿತರು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. 21,928 ಮಂದಿ ಖಾಸಗಿ ಅಭ್ಯರ್ಥಿಗಳಾಗಿ ನೋಂದಾಯಿಸಿಕೊಂಡಿದ್ದರು.