ಬೆಂಗಳೂರು: ಕರ್ನಾಟಕದಲ್ಲಿ ಮೂರ್ನಾಲ್ಕು ದಿನಗಳಿಂದ ಮಳೆ ಜೋರಾಗಿದೆ. ಬೆಂಗಳೂರಿನಲ್ಲಿ ಸುರಿಯುತ್ತಿರುವ ಮಳೆಯಿಂದ ಹಲವು ಏರಿಯಾಗಳು ಅರ್ಧಕ್ಕರ್ಧ ಮುಳುಗಡೆಯಾದಂತಾಗಿವೆ. ಇನ್ನೂ 4 ದಿನಗಳ ಕಾಲ ಕರ್ನಾಟಕದ ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ ಮಳೆ ಮುಂದುವರೆಯಲಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯಿಂದ ಹಳದಿ ಅಲರ್ಟ್ ಘೋಷಿಸಲಾಗಿದೆ. ಇಂದಿನಿಂದ ಜೂನ್ 24ರವರೆಗೆ ರಾಜ್ಯಾದ್ಯಂತ ನಿರಂತರ ಮಳೆಯಾಗಲಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು, ಚಾಮರಾಜನಗರ, ಬಾಗಲಕೋಟೆ, ಬೆಳಗಾವಿ, ಬೀದರ್, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ತುಮಕೂರು, ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಲ್ಲಿ ಇಂದಿನಿಂದ ಜೂನ್ 24ರವರೆಗೆ ಹಳದಿ ಅಲರ್ಟ್ ಘೋಷಿಸಲಾಗಿದೆ. ಜೂನ್ 23ರಿಂದ ಉತ್ತರ ಭಾರತಕ್ಕೆ ನೈಋತ್ಯ ಮುಂಗಾರು ಪ್ರವೇಶವಾಗಲಿದೆ.
ಇಂದಿನಿಂದ 4 ದಿನ ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಇಂದಿನಿಂದ ಜೂನ್ 24ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ರಾಜ್ಯದಲ್ಲಿ ಮುಂದಿನ 4 ದಿನಗಳ ಕಾಲ ಮುಂಗಾರು ಚುರುಕುಗೊಳ್ಳಲಿದೆ. ಪರಿಣಾಮ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಮಳೆ ಸುರಿಯುವ ಲಕ್ಷಣಗಳು ಇವೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


























