ಚಿಕ್ಕಮಗಳೂರು: ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆ ರಾಜ್ಯ ಹೆದ್ದಾರಿ ರಸ್ತೆ ಕೊಚ್ಚಿ ಹೋಗಿರುವ ಘಟನೆ ಜಿಲ್ಲೆಯ ಶೃಂಗೇರಿ ತಾಲೂಕಿನ ನೇರಳೆಕೊಡಿಗೆ ಬಳಿ ನಡೆದಿದೆ.
ಶೃಂಗೇರಿ ತಾಲೂಕಿನ ನೇರಳೆಕೊಡಿಗೆ ಬಳಿ 100 ಅಡಿಯಷ್ಟು ರಸ್ತೆ ಕೊಚ್ಚಿ ಹೋಗಿದ್ದು, ಶೃಂಗೇರಿ-ಆಗುಂಬೆ ಮಾರ್ಗದ ಸಂಪರ್ಕ ಕಡಿತಗೊಂಡಿದೆ. ಭಾರೀ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.

ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಮುಂದುವರೆದಿದ್ದು, ಹಲವೆಡೆ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕೊಪ್ಪ, ಮೂಡಿಗೆರೆ, ಶೃಂಗೇರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಬಿ.ಇ.ಓ. ರಜೆ ಘೋಷಣೆ ಮಾಡಿದ್ದಾರೆ.

























