ಮಂಗಳೂರು: ಮಳಲಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಮತ್ತೆ ಹೈಕೋರ್ಟ್ ಮೆಟ್ಟಿಲೇರಿದ್ದ ಹಿಂದೂ ಸಂಘಟನೆಗಳಿಗೆ ಹಿನ್ನಡೆಯಾಗಿದ್ದು. ಅಸಲು ದಾವೆಯ ಸಿಂಧುತ್ವದ ಕುರಿತು ವಿಚಾರಣೆ ನಡೆಸುತ್ತಿರುವ ಮಂಗಳೂರು ಸಿವಿಲ್ ನ್ಯಾಯಾಲಯದ ಕ್ರಮ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ತಕರಾರು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಮಂಗಳೂರಿನ ತೆಂಕ ಉಳೇಪಾಡಿ ಗ್ರಾಮದ ಧನಂಜಯ್ ಹಾಗೂ ಬಡಗ ಉಳೇಪಾಡಿ ಗ್ರಾಮದ ಮನೋಜ್ ಕುಮಾರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಸಚಿನ್ ಶಂಕರ್ ಮಗದಂ ಅವರಿದ್ದ ಪೀಠ ಶುಕ್ರವಾರ ಪ್ರಕಟಿಸಿದ್ದು ಅರ್ಜಿ ವಜಾಗೊಳಿಸಿ ಆದೇಶಿಸಿದೆ.
ಇದರೊಂದಿಗೆ ಪ್ರಕರಣಕ್ಕೆ ಸಂಬಂಧಿಸಿ ಸಲ್ಲಿಕೆಯಾಗಿರುವ ಅಸಲು ದಾವೆಯ ಸಿಂಧುತ್ವದ ಕುರಿತು ವಾದ-ಪ್ರತಿವಾದ ಆಲಿಸಿದರೂ, ಯಾವುದೇ ಆದೇಶ ಹೊರಡಿಸಬಾರದು ಎಂದು ಮಂಗಳೂರಿನ 3ನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯಕ್ಕೆ ಜೂ.13ರಂದು ನೀಡಿದ್ದ ಮಧ್ಯಂತರ ಆದೇಶವೂ ತೆರವುಗೊಂಡಂತಾಗಿದೆ.



























