ಮಾಜಿ ಸಿಎಂ ಸಿದ್ದರಾಮಯ್ಯ ರವರ 75ನೇ ವರ್ಷದ ಹುಟ್ಟುಹಬ್ಬದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಬೆಣ್ಣೆನಗರಿ ದಾವಣಗೆರೆಯಲ್ಲಿ ಸಿದ್ದರಾಮೋತ್ಸವ ಸಮಾರಂಭ ಇಂದು ಅದ್ದೂರಿಯಾಗಿ ನಡೆಯಲಿದ್ದು, ಕಾರ್ಯಕ್ರಮ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ.
ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕರ್ನಾಟಕದ ಹಲವಾರು ಕಡೆಗಳಿಂದ ಕಾಂಗ್ರೆಸ್ ಕಾರ್ಯಕರ್ತರು ಆಗಮಿಸುತ್ತಿದ್ದು, ಅದೇ ರೀತಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ವಿಟ್ಲ-ಉಪ್ಪಿನಂಗಡಿ ಬ್ಲಾಕ್ ನಿಂದಲೂ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಸಿದ್ದರಾಮಯ್ಯ ಅವರ 75ನೇ ವರ್ಷದ ಹುಟ್ಟುಹಬ್ಬದ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ ತೆರಳಿದ್ದು, ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಶಾಮನೂರು ಪ್ಯಾಲೇಸ್ ಮೈದಾನದಲ್ಲಿ ಬೆಳಗ್ಗೆ 10 ಗಂಟೆಗೆ ಕಾರ್ಯಕ್ರಮ ಆರಂಭಗೊಂಡಿದ್ದು, ಮಧ್ಯಾಹ್ನ 12 ಗಂಟೆಗೆ ಸಿದ್ದರಾಮಯ್ಯ ಅವರು ಆಗಮಿಸಲಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು 12.30ಕ್ಕೆ ಬರಲಿದ್ದು, ಕಾರ್ಯಕ್ರಮಕ್ಕೆ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ. ವೇದಿಕೆಯ ಮುಂಭಾಗದಲ್ಲಿ ರಾಹುಲ್ ಗಾಂಧಿ, ಸಿದ್ದರಾಮಯ್ಯ, ಡಿ. ಕೆ. ಶಿವಕುಮಾರ್ ಸೇರಿದಂತೆ ಕೇಂದ್ರ ನಾಯಕರಿಗೆ ಆಸನ ವ್ಯವಸ್ಥೆ ಮಾಡಲಾಗಿದೆ. ಎಡಭಾಗದಲ್ಲಿ ಇತರ ಜನಪ್ರತಿನಿಧಿಗಳು ಕುಳಿತು ಕಾರ್ಯಕ್ರಮ ವೀಕ್ಷಿಸಲಿದ್ದಾರೆ.
ಕಾರ್ಯಕ್ರಮಕ್ಕೆ ಆಗಮಿಸಲು ರಾಜ್ಯದ ವಿವಿಧೆಡೆಗಳಿಂದ 8000 ಬಸ್‌ಗಳ ವ್ಯವಸ್ಥೆ ಮಾಡಲಾಗಿದ್ದು, ಮುಂಜಾನೆಯಿಂದಲೇ ಬಂದವರಿಗೆ ಬೆಳಗ್ಗಿನ ಉಪಾಹಾರದ ವ್ಯವಸ್ಥೆಯನ್ನೂ ಮಾಡಲಾಗಿದೆ.

























