ಪುತ್ತೂರು: ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಡಿಯಲ್ಲಿ 70ನೇ ಸಂಸ್ಥೆಯಾಗಿ ಕೇಂದ್ರೀಯ ಪಠ್ಯಕ್ರಮದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ (ಸಿಬಿಎಸ್‌ಇ) ಆರಂಭಿಸಲಾಗುತ್ತಿದೆ. ಈ ಸಂಸ್ಥೆಯ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಏ.08ಕ್ಕೆ ನಡೆಯಲಿದ್ದು, ಸಿಎಂ ಯಡಿಯೂರಪ್ಪ ನೂತನ ಕಟ್ಟಡ ಲೋಕಾರ್ಪಣೆ ಮಾಡಲಿದ್ದಾರೆ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ. ಕಲ್ಲಡ್ಕ ಪ್ರಭಾಕರ ಭಟ್ ಹೇಳಿದರು.
ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ. ಕಲ್ಲಡ್ಕ ಪ್ರಭಾಕರ ಭಟ್ ಪತ್ರಿಕಾಗೋಷ್ಠಿನಗರದಲ್ಲಿರುವ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಸಂಘದ ವತಿಯಿಂದ ಏ.8ರಂದು ನೂತನ ಕಟ್ಟಡ ಲೋಕಾರ್ಪಣೆ ಉದ್ಘಾಟನಾ ಸಮಾರಂಭ ನಡೆಯಲಿದೆ. ಈ ವೇಳೆ, ಹೊಸನಗರ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಅವರು ಆಶೀರ್ವಚನ ನೀಡಲಿದ್ದಾರೆ. ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಎಸ್. ಅಂಗಾರ, ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ಸಂಜೀವ ಮಠಂದೂರು, ನಗರಸಭಾ ಅಧ್ಯಕ್ಷ ಜೀವಂಧರ ಜೈನ್, ಕೆನರಾ ಬ್ಯಾಂಕ್ ಮಂಗಳೂರು ವೃತ್ತ ಕಚೇರಿಯ ಮಹಾಪ್ರಬಂಧಕ ಯೋಗೀಶ್ ಆಚಾರ್ಯ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.
ಕೇಂದ್ರೀಯ ಪಠ್ಯಕ್ರಮದಲ್ಲಿ ಆಂಗ್ಲಮಾಧ್ಯಮ ಶಾಲೆ ಆರಂಭಿಸಬೇಕೆಂಬ ವಿದ್ಯಾವರ್ಧಕ ಸಂಘದ ಕನಸು ಈಗ ನನಸಾಗುತ್ತಿದೆ. ಭಾರತೀಯ ಸಂಸ್ಕೃತಿ, ದೇಶೀಯ ಚಿಂತನೆಗಳ ಅಡಿಯಲ್ಲಿ ಆಧುನಿಕ ಶಿಕ್ಷಣ ನೀಡಬೇಕೆಂಬುದು ನಮ್ಮ ಸಂಸ್ಥೆಯ ಧ್ಯೇಯವಾಗಿದೆ. ಅದೇ ಪ್ರಕಾರ ನಮ್ಮ70 ಶಿಕ್ಷಣ ಸಂಸ್ಥೆಗಳಲ್ಲೂ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ. 2020-21ನೇ ಸಾಲಿನಿಂದಲೇ ಸಿಬಿಎಸ್‌ಇ ಶಾಲೆ ಕಾರ್ಯ ಆರಂಭಿಸಿದೆ. ಪಠ್ಯಕ್ರಮದ ಶಿಕ್ಷಣದ ಜೊತೆಗೆ ವೈಜ್ಞಾನಿಕ ಸಂಗತಿಗಳನ್ನು ಪ್ರಾಯೋಗಿಕವಾಗಿ ತೋರಿಸುವ ಸಲುವಾಗಿ ಸಂಸ್ಥೆಯ ವಠಾರದಲ್ಲಿಸೈನ್ಸ್ ಪಾರ್ಕ್ ಸ್ಥಾಪಿಸಲಾಗಿದೆ. ಇದರಲ್ಲಿ ಮೂಲ ವೈಜ್ಞಾನಿಕ ಅಂಶಗಳನ್ನು ಪ್ರಾಯೋಗಿಕವಾಗಿ ತೋರಿಸಲಾಗುತ್ತದೆ. ಇದಲ್ಲದೆ ಒಳಾಂಗಣ ವಿಜ್ಞಾನ ಪ್ರಯೋಗಾಲಯವೂ ಇದೆ.
ವಿಜ್ಞಾನ ಪಾರ್ಕ್ ಅನ್ನು ಪುತ್ತೂರು ಮೂಲದ ಅಮೆರಿಕದ ಹೃದ್ರೋಗ ತಜ್ಞೆ ಡಾ. ಅನ್ನಪೂರ್ಣ ಎಸ್. ಕಿಣಿ ಕೊಡುಗೆಯಾಗಿ ನೀಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೆ.ಎಂ. ಕೃಷ್ಣ ಭಟ್, ವಿವೇಕಾನಂದ ಆಂಗ್ಲಮಾಧ್ಯಮ ಶಾಲೆ (ಸಿಬಿಎಸ್‌ಇ)ಯ ಆಡಳಿತ ಮಂಡಳಿ ಅಧ್ಯಕ್ಷೆ ವಸಂತಿ ಕೆದಿಲ, ಸಂಚಾಲಕ ಭರತ್ ಪೈ, ಪ್ರಾಚಾರ್ಯರಾದ ಸಿಂಧೂ ವಿ.ಜಿ. ವಿವೇಕಾನಂದ ಪದವಿ ಕಾಲೇಜಿನ ಕಾರ್ಯದರ್ಶಿ ಮುರಳಿಕೃಷ್ಣ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.