ಬೆಂಗಳೂರು: ಶಾಲಾ ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದಂತೆ ಸುಗ್ರೀವಾಜ್ಞೆ ಹೊರಡಿಸಲು ಸರ್ಕಾರ ನಿರ್ಧರಿಸಿದ್ದು , ಇದಕ್ಕೆ ಶೀಘ್ರದಲ್ಲೇ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಪಡೆಯಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ಕುಮಾರ್ ತಿಳಿಸಿದ್ದಾರೆ.
ಅನೇಕ ವರ್ಷಗಳಿಂದ ಸಾವಿರಾರು ಶಿಕ್ಷಕರು ವರ್ಗಾವಣೆ ನಿರೀಕ್ಷೆಯಲ್ಲಿದ್ದಾರೆ. ಶಿಕ್ಷಕರಿಗೆ ನೀಡಿದ ಭರವಸೆಯಂತೆ ವರ್ಗಾವಣೆಗೆ ಅವಕಾಶ ಮಾಡಿಕೊಡಲು ಸುಗ್ರೀವಾಜ್ಞೆ ಹೊರಡಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ. ನಮ್ಮ ಸರ್ಕಾರ ಬಂದ ಆರಂಭದಲ್ಲಿ ವರ್ಗಾವಣೆಯ ಆಶ್ವಾಸನೆ ನೀಡಿದ್ದು ಅದನ್ನು ಈಡೇರಿಸುವುದು ನಮ್ಮ ಕರ್ತವ್ಯ ಆಗಿರುವುದರಿಂದ ಸುಗ್ರೀವಾಜ್ಞೆ ಸಿದ್ಧಪಡಿಸಲಾಗಿದೆ. ಈ ಹಿಂದೆ ವರ್ಗಾವಣೆಗೆ ಸಿದ್ಧತೆ ನಡೆಸಿದಾಗ ಕಡ್ಡಾಯ ಮತ್ತು ಹೆಚ್ಚುವರಿ ವರ್ಗಾವಣೆ ಪ್ರಶ್ನಿಸಿ ಶಿಕ್ಷಕರೊಬ್ಬರು ಕೆಎಟಿ ಮೊರೆಹೋಗಿದ್ದು, ವರ್ಗಾವಣೆ ಪ್ರಕ್ರಿಯೆಗೆ ತಡೆ ನೀಡಲಾಗಿದೆ.
2016 – 17 ರಲ್ಲಿ ಹೆಚ್ಚುವರಿ ಶಿಕ್ಷಕರು ಎಂದು ಗುರುತಿಸಲಾದ ಕಾರಣಕ್ಕೆ ಕೆಲವರು ಬೇರೆ ತಾಲೂಕಿಗೆ ವರ್ಗಾವಣೆಯಾಗಿ ಸಂಕಷ್ಟದಲ್ಲಿದ್ದಾರೆ. ಕೆಎಟಿ ಆದೇಶದಿಂದ ಕೋರಿಕೆ ಮತ್ತು ಪರಸ್ಪರ ವರ್ಗಾವಣೆ ಕೋರಿ ಅರ್ಜಿ ಸಲ್ಲಿಸಿರುವ 75 ಸಾವಿರಕ್ಕೂ ಹೆಚ್ಚು ಶಿಕ್ಷಕರು ಅತಂತ್ರ ಸ್ಥಿತಿಯಲ್ಲಿದ್ದಾರೆ. ಹಿನ್ನೆಲೆಯಲ್ಲಿ ಶಿಕ್ಷಕರ ವರ್ಗಾವಣೆ ಕಾಯ್ದೆಗೆ ಸಂಬಂಧಿಸಿದಂತೆ ಮಾರ್ಪಾಡು ಮಾಡಿ ಸುಗ್ರಿವಾಜ್ಞೆ ಹೊರಡಿಸಲಾಗುವುದು ಎಂದು ಹೇಳಿದ್ದಾರೆ.