ಬಂಟ್ವಾಳ: ಗ್ರಾಮದ ಅಭಿವೃದ್ಧಿಯ ಜೊತೆಗೆ ಆರ್ಥಿಕವಾಗಿ ಹಿಂದುಳಿದವರಿಗೆ ಸಹಕರಿಸುವುದು ನಮ್ಮ ಮೂಲ ಉದ್ದೇಶ ಎಂದು ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ಹೇಳಿದರು.
ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ನೀರಿನ ಟ್ಯಾಂಕು ಹಾಗೂ ವಿಕಲಚೇತನರಿಗೆ ಸಹಾಯಧನದ ಚೆಕ್ಕನ್ನು ವಿತರಿಸಿ ಅವರು ಮಾತನಾಡಿದರು.

ಕಳೆದ ವರ್ಷ ನಲುವತ್ತು ಮಂದಿ ವಿಕಲಚೇತನ ಫಲಾನುಭವಿಗಳಿಗೆ ಸಹಾಯಧನ ನೀಡಲಾಗಿದೆ. ಈ ವರ್ಷ ನಲುವತ್ತೈದು ಮಂದಿ ಫಲಾನುಭವಿಗಳಿಗೆ ನೀರಿನ ಟ್ಯಾಂಕು ಮತ್ತು ಹನ್ನೆರಡು ಮಂದಿ ವಿಕಲಚೇತನರಿಗೆ ಸಹಾಯಧನದ ಚೆಕ್ಕನ್ನು ನೀಡಲಾಗಿದೆ. ಮುಂದಿನ ದಿನಗಳಲ್ಲಿಯೂ ಈ ಕಾರ್ಯವನ್ನು ಮುಂದುವರಿಸಲಾಗುವುದು ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಪಂಚಾಯತ್ ಉಪಾಧ್ಯಕ್ಷೆ ಪ್ರೀತಿ ಡಿನ್ನಾ ಪಿರೇರಾ, ಸದಸ್ಯರಾದ ಸುದೀಪ್ ಕುಮಾರ್ ಶೆಟ್ಟಿ, ಇಬ್ರಾಹಿಂ.ಕೆ.ಮಾಣಿ, ಮೆಲ್ವಿನ್ ಕಿಶೋರ್ ಮಾರ್ಟಿಸ್, ನಾರಾಯಣ ಶೆಟ್ಟಿ, ರಮಣಿ.ಡಿ.ಪೂಜಾರಿ, ಸೀತಾ, ಸುಜಾತ ಉಪಸ್ಥಿತರಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಿರಿಜಾ ಸ್ವಾಗತಿಸಿದರು. ಪಂಚಾಯತ್ ಸಿಬ್ಬಂದಿ ಸಹಕರಿಸಿದರು.




























