ಪುತ್ತೂರು: ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರು, ಬಿಜೆಪಿಯ ಜಿಲ್ಲಾ ಕಾರ್ಯಕಾರಿಣಿಯ ಸದಸ್ಯರೂ ಆಗಿದ್ದ ಕೋಡಿಂಬಾಡಿ ರೈ ಎಸ್ಟೇಟ್ ಮಾಲಕ ಅಶೋಕ್ ಕುಮಾರ್ ರೈ ರವರು ಜ.22 ರಂದು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿದು ಬಂದಿದೆ.
ಜ.22 ರಂದು ಅಪರಾಹ್ನ ಮಂಗಳೂರಿನ ನೆಹರೂ ಮೈದಾನದಲ್ಲಿ ನಡೆಯಲಿರುವ ಕಾಂಗ್ರೆಸ್ನ ಪ್ರಜಾಧ್ವನಿ ಕಾರ್ಯಕ್ರಮದಲ್ಲಿ ಅಶೋಕ್ ಕುಮಾರ್ ರೈ ರವರು ಕಾಂಗ್ರೆಸ್ ಸೇರ್ಪಡೆಗೊಳ್ಳಲಿದ್ದಾರೆ.
ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರಾಗಿರುವ ಮಾಜಿ ಸಚಿವ ಡಿ.ಕೆ. ಶಿವಕುಮಾರ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾಗಿರುವ ಮಾಜಿ ರಾಜ್ಯಸಭಾ ಸದಸ್ಯ ಬಿ.ಕೆ. ಹರಿಪ್ರಸಾದ್ ಸೇರಿದಂತೆ ರಾಜ್ಯ ಮತ್ತು ರಾಷ್ಟ್ರಮಟ್ಟದ ಹಲವು ಮಂದಿ ನಾಯಕರು ಪ್ರಜಾಧ್ವನಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ವಿವಿಧ ದೇವಸ್ಥಾನ, ದೈವಸ್ಥಾನಗಳ ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶೋತ್ಸವದ ರೂವಾರಿಗಳೂ, ಕಂಬಳ ಮತ್ತು ಅಡಿಕೆ ಬೆಳೆಗಾರರ ಪರ ಹೋರಾಟಗಾರರೂ ಆಗಿರುವ ಉದ್ಯಮಿ ಅಶೋಕ್ ರೈಯವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಳ್ಳಲಿದ್ದಾರೆ ಎಂದು ಹಲವು ದಿನಗಳಿಂದ ಸುದ್ದಿಯಾಗಿತ್ತು. ಇದೀಗ ಹೈಕಮಾಂಡ್ ಬುಲಾವ್ ಹಿನ್ನೆಲೆಯಲ್ಲಿ ಅವರು ಕಾಂಗ್ರೆಸ್ನ ಬೃಹತ್ ಸಮಾವೇಶದಲ್ಲಿ ಅಧಿಕೃತವಾಗಿ ಪಕ್ಷ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿದು ಬಂದಿದೆ.
ಪುತ್ತೂರಿನಿಂದ ಬಸ್, ವಿವಿಧ ವಾಹನ ಸೇರಿದಂತೆ 150ಕ್ಕೂ ಅಧಿಕ ವಾಹನಗಳಲ್ಲಿ ಅಶೋಕ್ ಕುಮಾರ್ ರೈ ಅಭಿಮಾನಿ ಬಳಗದವರು ಕಾಂಗ್ರೆಸ್ ಕಾರ್ಯಕ್ರಮಕ್ಕೆ ತೆರಳಲಿದ್ದಾರೆ. ಅಶೋಕ್ ಕುಮಾರ್ ರೈಯವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗುತ್ತಿರುವುದು ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದೆ..