ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಆರಂಭವಾಗಿದ್ದು, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 49,975 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಉಭಯ ಜಿಲ್ಲೆಗಳಲ್ಲಿ ಒಟ್ಟು 80 ಕ್ಷೇತ್ರಗಳಲ್ಲಿ ಪರೀಕ್ಷೆ ನಡೆಯಲಿದೆ.
ಬೆಳಗ್ಗೆ 10.30ರಿಂದ ಪರೀಕ್ಷೆಗಳು ಆರಂಭವಾಗಲಿದ್ದು, ಮಧ್ಯಾಹ್ನ 1.30ರ ತನಕ ನಡೆಯಲಿದೆ. ಪರೀಕ್ಷೆಗಳಲ್ಲಿ ಯಾವುದೇ ಗೊಂದಲಗಳಾಗದಂತೆ ಪಾರದರ್ಶಕವಾಗಿ ನಡೆಯಲು ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿಯೂ ಸಿಸಿ ಕ್ಯಾಮರಾ ಮೂಲಕ ನಿಗಾ ಇಡುವ ಪ್ರಕ್ರಿಯೆ ನಡೆಯಲಿದೆ.
ಪ್ರತೀ ಕೊಠಡಿಗಳಲ್ಲಿ ನೀರಿನ ವ್ಯವಸ್ಥೆ ಮಾಡಲಾಗಿದ್ದು, ಮೇಲ್ವಿಚಾರಕರ ಅನುಮತಿಯೊಂದಿಗೆ ನೀರು ಪಡೆದು ಕುಡಿಯಲು ಅವಕಾಶ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳು, ನಿಯೋಜಿತ ಸಿಬಂದಿ ಹೊರತುಪಡಿಸಿ ಹೊರಗಿನವರಿಗೆ ಪರೀಕ್ಷಾ ಕೇಂದ್ರದೊಳಗೆ ಪ್ರವೇಶ ನಿರ್ಬಂಧಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತಲೂ ಪೊಲೀಸ್ ಬಿಗಿ ಬಂದೋಬಸ್ತ್ ಇದ್ದು, ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.