ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಕಾರಿಂಜೇಶ್ವರ ಸನ್ನಿಧಿಯ ಸುತ್ತಮುತ್ತಲಿನ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆಗೆ ನಿಷೇಧ ಮಾಡಿ ಸರಕಾರ ಆದೇಶ ಹೊರಡಿಸಿದೆ.
ಈ ಮೂಲಕ ಹಿಂದೂ ಜಾಗರಣಾ ವೇದಿಕೆಯ ಹೋರಾಟಕ್ಕೆ ಜಯ ಸಿಕ್ಕಿದೆ.
ಕಾರಿಂಜ ದೇವಾಲಯದ ಸುತ್ತಮುತ್ತ ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿರುವುದರಿಂದ ದೇವಸ್ಥಾನಕ್ಕೆ ಹಾನಿಯಾಗುತ್ತಿದೆ ಎಂಬುದು ಅರೋಪವಾಗಿದ್ದು, ಇದರ ವಿರುದ್ಧ ಪ್ರತಿಭಟನೆಗಳು ಹೋರಾಟಗಳು ನಿರಂತರವಾಗಿ ನಡೆದಿತ್ತು. ಇದೀಗ ಸರಕಾರ ಗಣಿಗಾರಿಕೆಗೆ ನಿಷೇಧದ ಆದೇಶ ಮಾಡಿದೆ.
ಕರ್ನಾಟಕ ಉಪ ಖನಿಜ ರಿಯಾಯಿತಿ ನಿಯಮಗಳು, 1994ರ ನಿಯಮ 8(3) ರಲ್ಲಿ ಪ್ರದತ್ತವಾಗಿರುವ ಅಧಿಕಾರವನ್ನು ಚಲಾಯಿಸಿ ಸರ್ಕಾರವು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲೂಕು, ಕಾವಳಮುಡೂರು ಗ್ರಾಮದ ವ್ಯಾಪ್ತಿಯ ಶ್ರೀ ಕಾರಿಂಜೇಶ್ವರ ದೇವಸ್ಥಾನದ 02 ಕಿಲೋ ಮೀಟರ್ ಸುತ್ತಳತೆಯ ಪ್ರದೇಶವನ್ನು ಧಾರ್ಮಿಕ ಚಟುವಟಿಕೆಗಳ ಉದ್ದೇಶಕ್ಕಾಗಿ ಕಾಯ್ದಿರಿಸಿ, ಸದರಿ ಸ್ಥಳದ 02 ಕಿಲೋ ಮೀಟರ್ ಸುತ್ತಳತೆ ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಗಣಿಗಾರಿಕೆ ಮತ್ತು ಕಲ್ಲುಪುಡಿ ಚಟುವಟಿಕೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನಿಷೇಧಿಸಿದೆ ಎಂಬ ಆದೇಶ ಹೊರಡಿಸಿದೆ.
ಅಕ್ರಮ ಗಣಿಗಾರಿಕೆಯ ವಿರುದ್ಧ ಹಿಂದೂ ಜಾಗರಣ ವೇದಿಕೆ ವತಿಯಿಂದ ನಿರಂತರವಾಗಿ ಹೋರಾಟಗಳು ನಡೆದಿದ್ದು, ಇದಿಗ ಹಿಂದೂ ಜಾಗರಣಾ ವೇದಿಕೆಯ ಹೋರಾಟಕ್ಕೆ ಜಯ ಸಿಕ್ಕಿದಂತಾಗಿದೆ.


























