ಪುತ್ತೂರು: ಈ ಬಾರಿಯ ವಿಧಾನ ಸಭಾ ಚುನಾವಣೆಯಲ್ಲಿ ಮಾಜಿ ಶಾಸಕಿ ಶಕುಂತಳಾ ಶೆಟ್ಟಿಯವರಿಗೆ ಟಿಕೆಟ್ ನೀಡದಿದ್ದಲ್ಲಿ ಪುತ್ತೂರು ಮಹಿಳಾ ಕಾಂಗ್ರೆಸ್ ನ ಎಲ್ಲ ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆ ನೀಡುವುದಾಗಿಯೂ ಹಾಗು ಶಕುಂತಳಾ ಶೆಟ್ಟಿಯವರು ಪಕ್ಷೇತರರರಾಗಿ ಸ್ಪರ್ಧಿಸಲು ಆಗ್ರಹಿಸುವುದಾಗಿಯೂ ಮಹಿಳಾ ಕಾಂಗ್ರೆಸ್ ಪುತ್ತೂರು ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷೆ ಶಾರದ್ ಅರಸ್ ತಿಳಿಸಿದ್ದಾರೆ.
ಪುತ್ತೂರಿನಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು ‘ಶಕುಂತಳಾ ಶೆಟ್ಟಿಯವರು ತಮ್ಮ ಶಾಸಕತ್ವದ ಅವಧಿಯಲ್ಲಿ ಮಹಿಳೆಯರ ಏಳಿಗೆಗಾಗಿ ಅನೇಕ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದು, ಮಹಿಳೆಯರ ರಕ್ಷಣೆಗೆ ಮಹಿಳಾ ಪೊಲೀಸ್ ಠಾಣೆಯನ್ನು ಪುತ್ತೂರಿನಲ್ಲಿ ಆರಂಭಿಸಿದರು.
ಮಹಿಳೆಯರು ಆರ್ಥಿಕವಾಗಿ ಬೆಳೆಯಲು ಸ್ತ್ರೀ ಶಕ್ತಿ ಸಂಘಟನೆಗಳನ್ನು ಬಲಪಡಿಸಲು ಸ್ತ್ರೀ ಶಕ್ತಿ ಭವನದ ಸ್ಥಾಪನೆ ಮಾಡಿದ್ದಾರೆ. ಮಹಿಳೆಯರ ಸಮಸ್ಯೆಗಳ ಬಗ್ಗೆ ವಿಧಾನಸಭೆಯಲ್ಲಿ ಮಾತನಾಡುವ ಮೂಲಕ ಮಹಿಳೆಯರಿಗೆ ಭರವಸೆಯ ಆಶಾಕಿರಣವಾಗಿದ್ದಾರೆ ಎಂದರು.

ಬಿಜೆಪಿಯು ದಕ್ಷಿಣ ಕನ್ನಡದಲ್ಲಿ ಮಹಿಳೆಯರಿಗೆ ಪುತ್ತೂರು ಮತ್ತು ಸುಳ್ಯದಲ್ಲಿ ಅವಕಾಶ ನೀಡಿದೆ. ಆದರೆ ಕಾಂಗ್ರೆಸ್ ಪಕ್ಷ ಮಹಿಳೆಯನ್ನು ಕಡೆಗಣಿಸುವ ಮೂಲಕ ದಕ್ಷಿಣ ಕನ್ನಡದಲ್ಲಿ ಅತೀ ಹೆಚ್ಚು ಇರುವ ಮಹಿಳಾ ಮತದಾರರನ್ನು ಅವಮಾನಿಸುವ ಕೆಲಸದಲ್ಲಿ ತೊಡಗಿದೆ ಎಂದು ಅನಿಸುತ್ತಿದೆ. ಕಾಂಗ್ರೆಸ್ ಹೈ ಕಮಾಂಡ್ ಈ ವಿಷಯದ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಇಲ್ಲವಾದರೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಇದರ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದರು.
ಒಂದು ವೇಳೆ ಶಕುಂತಳಾ ಶೆಟ್ಟಿಯವರಿಗೆ ಟಿಕೆಟ್ ನಿರಾಕರಣೆ ಮಾಡಿದರೆ ಮಹಿಳಾ ಕಾಂಗ್ರೆಸ್ ಸಮಿತಿಯು ಸಾಮೂಹಿಕ ರಾಜೀನಾಮೆ ನೀಡವುದರ ಜೊತೆಗೆ, ಶಕುಂತಳಾ ಶೆಟ್ಟಿಯವರು ಪಕ್ಷೇತರವಾಗಿ ಚುನಾವಣೆಯಲ್ಲಿ ಸ್ಪರ್ಧಿಸಬೇಕು ಎಂದು ಒತ್ತಾಯಿಸಲಿದೆ ಎಂದು ಹೇಳಿದರು.
ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷೆ ವಿಶಾಲಕ್ಷಿ ಬನ್ನೂರು ಮಾತನಾಡಿ, ಕಳೆದ ಜನವರಿಯಲ್ಲಿ ಬೆಂಗಳೂರಿನಲ್ಲಿ ಕಾಂಗ್ರೆಸ್ ನ ನಾಯಕಿ ಪ್ರಿಯಾಂಕ ಗಾಂಧಿಯವರ ನೇತ್ರತ್ವದಲ್ಲಿ ನಡೆದ ನಾ ನಾಯಕಿ ಕಾರ್ಯಕ್ರಮಕ್ಕೆ ಶಕುಂತಳಾ ಶೆಟ್ಟಿಯವರ ನೇತೃತ್ವದಲ್ಲಿ ಮೂರು ಬಸ್ಸಿನಷ್ಟು ಕಾರ್ಯಕರ್ತರು ಜಿಲ್ಲೆಯಿಂದ ತೆರಳಿ ಭಾಗವಹಿಸಿದ್ದಾರೆ. ಈ ವೇಳೆ ‘ಗೃಹಲಕ್ಷ್ಮೀ’ ಎಂಬ ಅದ್ಭುತ ಕಾರ್ಯಕ್ರಮ ಮಹಿಳೆಯರಿಗಾಗಿ ಪಕ್ಷ ಘೋಷಿಸಿದೆ. ಇಂತಹ ಪಕ್ಷ ಮಹಿಳಾ ಅಭ್ಯರ್ಥಿಗೆ ಟಿಕೆಟ್ ನೀಡಲು ಹಿಂದೇಟು ಹಾಕಬಾರದು. ಅನುಭವಿ ನಾಯಕಿ ಶಕುಂತಳಾ ಶೆಟ್ಟಿಯವರಿಗೆ ಟಿಕೆಟ್ ನೀಡಬೇಕೆಂದು ಆಗ್ರಹಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡೆಯರಾದ ವಿಲ್ಮಾ ಗೋನ್ಸಾಲ್ವಿಸ್, ಸುಧಾ ಕುಂಜತ್ತಾಯ, ಸೀತಾಭಟ್ ಉಪಸ್ಥಿತರಿದ್ದರು.






















