ಸುಬ್ರಹ್ಮಣ್ಯ : ದಕ್ಷಿಣ ಕನ್ನಡ ಜಿಲ್ಲೆಯ ಕಡಬ, ಸುಳ್ಯ ತಾಲೂಕುಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ನದಿಗಳು ಉಕ್ಕಿ ಹರಿಯುತ್ತಿವೆ.
ಸುಳ್ಯ ಕ್ಲಸ್ಟರ್‌ನ ವಿವಿಧ ಶಾಲೆಗಳಿಗೂ ರಜೆ ನೀಡಲಾಗಿದೆ. ಸುಬ್ರಹ್ಮಣ್ಯದಲ್ಲಿ ನೆರೆ ನೀರಿಗೆ ಸಿಲುಕಿದ್ದ 8 ಜನರನ್ನು ರಕ್ಷಿಸಲಾಗಿದೆ.
ಕುಮಾರಧಾರ ನದಿ ಸುಬ್ರಹ್ಮಣ್ಯ ಪರಿಸರದಲ್ಲಿ ಉಕ್ಕಿ ಹರಿಯುತ್ತಿದ್ದು, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕೆಲಸಕ್ಕೆ ಹಾಗೂ ಇತರ ಕಾರ್ಯಕ್ಕೆ ಬಂದಿದ್ದ ಓರ್ವ ಗರ್ಭಿಣಿ, ಇಬ್ಬರು ಮಕ್ಕಳು ಸೇರಿದಂತೆ ಒಟ್ಟು ಎಂಟು ಮಂದಿಯನ್ನು ಎಸ್.ಡಿ.ಆರ್.ಎಫ್. ತಂಡ ಬೋಟ್ ಮೂಲಕ ರಕ್ಷಿಸಿದ್ದು, ಅವರೆಲ್ಲರೂ ಸುರಕ್ಷಿತವಾಗಿ ಮನೆಗಳಿಗೆ ತಲುಪಿದ್ದಾರೆ.
ಕಡಬ ತಾಲೂಕು ಕಂದಾಯ ನಿರೀಕ್ಷಕರು, ಗ್ರಾಮ ಲೆಕ್ಕಿಗರು ಮತ್ತು ಎಸ್.ಡಿ.ಆರ್.ಎಫ್. ತಂಡದವರು ಸ್ಥಳದಲ್ಲಿದ್ದು, ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ.


























