ಬೆಂಗಳೂರು : ಯುವಕನೋರ್ವನನ್ನು ಕೊಲೆ ಮಾಡಿ ದೇವರಮನೆ ಸಮೀಪ ಗುಡ್ಡದಲ್ಲಿ ಹೆಣ ಎಸೆದು ಹೋಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರಿಗೆ ಕರ್ನಾಟಕ ಉಚ್ಛ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಈಗಾಗಲೇ ಕೊಲೆಗೆ ಸಂಬಂಧಿಸಿದಂತೆ ಬಂಟ್ವಾಳ ಮೂಲದ ರಿಜ್ವಾನ್ ಮತ್ತು ಝೈನುಲ್ಲಾ ಇದರೊಂದಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಆರು ಮಂದಿಯನ್ನು ಬಂಧಿಸಲಾಗಿತ್ತು.
ಜೂನ್ 8 ರಂದು ದೇವರಮನೆ ಸಮೀಪ ರಸ್ತೆಯಂಚಿನಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿತ್ತು. ಆ ಶವ ತಮ್ಮ ಮಗನದೆಂದು ಬಂಟ್ವಾಳ ಮೂಲದ ಕುಟುಂಬ ಗುರುತಿಸಿತ್ತು.
ಕೊಲೆಗೀಡಾದ ಸಾವದ್ ಮಾದಕವಸ್ತು ವ್ಯಸನಿಯಾಗಿದ್ದ ಮತ್ತು ಮಾದಕವಸ್ತು ಮಾರಾಟ ದಂಧೆಯಲ್ಲಿ ತೊಡಗಿಸಿಕೊಂಡಿದ್ದ ಎಂದು ತಿಳಿದು ಬಂದಿತ್ತು. ಗಾಂಜಾ ಮಾರಾಟ ವ್ಯವಹಾರದಲ್ಲಿ ಉಂಟಾದ ಗಲಾಟೆ ಕೊಲೆಗೆ ಕಾರಣವಾಗಿತ್ತು ಎಂದು ಪೊಲೀಸರು ಆರೋಪವನ್ನು ಮಾಡಿರುತ್ತಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಪಡುಬಿದ್ರೆಯ ಬೆಂಗ್ರೇ ಎಂಬಲ್ಲಿ ಸಾವದ್ ನನ್ನು ಕೊಲೆ ಮಾಡಿ ಹೆಣವನ್ನು ತಂದು ದೇವರಮನೆ ಗುಡ್ಡದಲ್ಲಿ ಎಸೆದು ಹೋಗಿದ್ದ ಬಗ್ಗೆ ಆರೋಪಿಗಳು ಹೇಳಿಕೆ ನೀಡಿದ್ದಾರೆಂದು ಪೊಲೀಸರು ಆರೋಪವನ್ನು ಮಾಡಿರುತ್ತಾರೆ.
ಪ್ರಕರಣದ ತನಿಖೆ ಕೈಗೊಂಡಿದ್ದ ಮೂಡಿಗೆರೆ ವೃತ್ತ ನಿರೀಕ್ಷಕ ಸೋಮೇಗೌಡ ಮತ್ತು ಬಣಕಲ್ ಎಸ್.ಐ. ಜಂಜೂರಾಜ್ ಮಹಾಜನ್ ನೇತೃತ್ವದ ಪೊಲೀಸ್ ತಂಡ ಆರೋಪಿಗಳನ್ನು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆಯಿಂದ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.
ಇದೀಗ ಇಬ್ಬರು ಆರೋಪಿಗಳಾದ ಆಫ್ರಿದ್ ಮತ್ತು ಇರ್ಶಾದ್ ಕರ್ನಾಟಕ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.
ಆರೋಪಿಗಳ ಪರ ಲೆಕ್ಸ್ ಜೂರಿಸ್ ಲಾ ಚೇಂಬರ್ ನ ವಕೀಲರಾದ ಆಸಿಫ್ ಬೈಕಾಡಿ, ಮಹಮ್ಮದ್ ಅಸ್ಗರ್ ಮುಡಿಪು ವಾದಿಸಿದ್ದಾರೆ.