ಮಂಗಳೂರು : ನಗರದ ಸುರತ್ಕಲ್ ಮತ್ತು ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ನಿರತರಾಗಿದ್ದ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಹಳೆಯಂಗಡಿ ಚೇಳ್ಯಾರುವಿನ ದೀಪಕ್ ಹಾಗೂ ಮರಕಡ ಕಾವೂರಿನ ಸಂದೀಪ್ ಶೆಟ್ಟಿ ಬಂಧಿತರು.

ಮಂಗಳೂರು ನಗರದ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಚೇಳ್ಯಾರು ಪರಿಸರದಲ್ಲಿ ಹಾಗೂ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಫಳ್ನೀರು ಎಂಬಲ್ಲಿ ಮೊಬೈಲ್ ಫೋನ್ ನಲ್ಲಿ ಬೆಟ್ಟಿಂಗ್ ಆ್ಯಪ್ ಉಪಯೋಗಿಸಿಕೊಂಡು ಪ್ರಸ್ತುತ ನಡೆಯುತ್ತಿರುವ ವಿಶ್ವಕಪ್ ಕ್ರಿಕೆಟ್ ಪಂದ್ಯಾಟಗಳ ಸೋಲು ಗೆಲುವಿನಲ್ಲಿ ಅದೃಷ್ಠದ ಆಟವಾದ ಕ್ರಿಕೆಟ್ ಬೆಟ್ಟಿಂಗ್ ಜೂಜಾಟವಾಡುತ್ತಾ ಸಾರ್ವಜನಿಕರಿಂದ ಹಣವನ್ನು ಸಂಗ್ರಹಿಸಿಕೊಂಡು ಅಕ್ರಮ ಬೆಟ್ಟಿಂಗ್ ದಂಧೆಯಲ್ಲಿ ನಿರತರಾಗಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಎರಡು ಕಡೆ ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ.
ಬಂಧಿತರಿಂದ ಬೆಟ್ಟಿಂಗ್ ದಂಧೆಗೆ ಸಾರ್ವಜನಿಕರಿಂದ ಸಂಗ್ರಹಿಸಿದ ಒಟ್ಟು ರೂ. 31,000/- ನಗದು ಹಾಗೂ 4 ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಆಂದಾಜು ಮೌಲ್ಯ ರೂ. 1,11,000/- ಎಂದು ಅಂದಾಜಿಸಲಾಗಿದೆ.
ಈ ಬಗ್ಗೆ ಸುರತ್ಕಲ್ ಹಾಗೂ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿದೆ.
ಈ ಬೆಟ್ಟಿಂಗ್ ದಂಧೆಯಲ್ಲಿ ಇನ್ನೂ ಇತರರು ಭಾಗಿಯಾಗಿದ್ದು, ಪತ್ತೆ ಕಾರ್ಯ ಮುಂದುವರಿದಿದೆ. ಈ ಅಕ್ರಮ ಕ್ರಿಕೆಟ್ ಬೆಟ್ಟಿಂಗ್ ಜೂಜಾಟ ಪ್ರಕರಣದ ಪತ್ತೆ ಕಾರ್ಯವನ್ನು ಮಂಗಳೂರು ನಗರದ ಪೊಲೀಸ್ ಆಯುಕ್ತ ಅನುಪಮ್ ಅಗರ್ ವಾಲ್ ರವರ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಯವರು ನಡೆಸಿದ್ದಾರೆ.
























