ಕೊರೊನಾ ಪರಿಸ್ಥಿತಿಯಿಂದಾಗಿ ಕರ್ನಾಟಕದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳನ್ನು ಸ್ಥಗಿತಗೊಳಿಸಲಾಗಿದ್ದು, ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗೆ ತೊಂದರೆ ಆಗದಂತೆ ವಿಶ್ವವಿದ್ಯಾಲಯದ ಶೈಕ್ಷಣಿಕ ವೇಳಾಪಟ್ಟಿಯನ್ವಯ ಅತಿಥಿ ಉಪನ್ಯಾಸಕರನ್ನು ಒಳಸಿಕೊಂಡು ಆನ್‌ಲೈನ್ ತರಗತಿಗಳನ್ನು ನಡೆಸಲು ಕಾಲೇಜು ಶಿಕ್ಷಣ ಇಲಾಖೆ ಆದೇಶಿಸಿದೆ.
ಈ ಕುರಿತು ಕಾಲೇಜು ಶಿಕ್ಷಣ ಇಲಾಖೆಯ ಮುಖ್ಯ ಆಡಳಿತಾಧಿಕಾರಿಗಳು ಸುತ್ತೋಲೆ ಹೊರಡಿಸಿದ್ದು, ಕಾಲೇಜು ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 2020-21ನೇ ಶೈಕ್ಷಣಿಕ ಸಾಲಿನ 2, 4 ಮತ್ತು 6ನೇ ಸಮಿಸ್ಟರ್ ಅವಧಿಯ ಪದವಿ ಮತ್ತು ಸ್ನಾತಕೋತ್ತರ ಪದವಿ ತರಗತಿಗಳ ಬೋಧನಾ ಕಾರ್ಯಭಾರಕ್ಕೆ ಅನುಗುಣವಾಗಿ ಅವಶ್ಯಕವಿರುವ ಅತಿಥಿ ಉಪನ್ಯಾಸಕರನ್ನು ಆಯ್ಕೆ ಮಾಡಿಕೊಳ್ಳಲು ಸುತ್ತೋಲೆಯಲ್ಲಿ ಅನುಮತಿ ನೀಡಲಾಗಿದೆ.
ಇನ್ನು ಪ್ರಾಂಶುಪಾಲರು ತಮ್ಮ ಕಾಲೇಜುಗಳಲ್ಲಿ ಈ ಹಿಂದೆ ಕಾರ್ಯನಿರ್ವಹಿಸುತ್ತಿದ್ದ ಅತಿಥಿ ಉಪನ್ಯಾಸಕರಿಗೆ ಮಾಹಿತಿ ನೀಡಿ, ಅರ್ಜಿಗಳನ್ನು ಖುದ್ದಾಗಿ ಅಥವಾ ಇ-ಮೇಲ್ ಮುಖಾಂತರ ಪಡೆದು, ಸುತ್ತೋಲೆಯಲ್ಲಿ ತಿಳಿಸಿರುವಂತೆ ಆಯ್ಕೆ ಪ್ರಕ್ರಿಯೆಯನ್ನು ಒಂದು ವಾರದೊಳಗಾಗಿ ಪೂರ್ಣಗೊಳಿಸಿ, ಆಯ್ಕೆ ಮಾಡಿಕೊಂಡ ಅತಿಥಿ ಉಪನ್ಯಾಸಕರ ವಿವರಗಳನ್ನು ಕೂಡಲೇ ಇಲಾಖೆಗೆ ಅಪ್ ಲೋಡ್ ಮಾಡಲು ಸೂಚಿಸಲಾಗಿದೆ.