ಮೈಸೂರು : ರಾಜ್ಯದಲ್ಲಿ ಹಿಜಾಬ್ ವಿಚಾರ ಮತ್ತೆ ಮುನ್ನಲೆಗೆ ಬಂದಿದೆ. ರಾಜ್ಯ ರಾಜಕೀಯ ನಾಯಕರು ಸಾಕಷ್ಟು ವಿರೋಧ ವ್ಯಕ್ತಪಡಿಸುತ್ತಿರುವ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ ಹಿಜಾಬ್ ನಿಷೇಧ ಆದೇಶ ಇನ್ನೂ ವಾಪಸ್ ಪಡೆದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾರೋ ಒಬ್ಬರು ಪ್ರಶ್ನೆ ಮಾಡಿದ್ದಕ್ಕೆ ಆ ಉತ್ತರ ಕೊಟ್ಟಿದ್ದೇನೆ. ಹಿಜಾಬ್ ನಿಷೇಧ ಆದೇಶ ವಾಪಸ್ಗೆ ಯೋಚನೆ ಮಾಡಿದ್ದೇವೆ. ಸರ್ಕಾರದಲ್ಲಿ ಈ ಬಗ್ಗೆ ಚರ್ಚೆ ಮಾಡಿ ನಿರ್ಧಾರ ಮಾಡುತ್ತೇವೆ ಎಂದು ಹೇಳಿದ್ದಾರೆ.
ಹಿಜಾಬ್ ವಾಪಸ್ ವಿಚಾರ ಭಾರೀ ಚರ್ಚೆಯಾಗ್ತಿದ್ದಂತೆ ಸಿಎಂ ಸಿದ್ದರಾಮಯ್ಯ ವ್ಯತಿರಿಕ್ತ ಹೇಳಿಕೆ ನೀಡಿದ್ದಾರೆ. ನಾನು ಹಿಜಾಬ್ ಹಿಂದಕ್ಕೆ ಪಡೆಯುತ್ತೇನೆ ಅಂತ ಹೇಳೇ ಇಲ್ಲ ಎಂದಿದ್ದಾರೆ.
ಹಿಜಾಬ್ ನಿಷೇಧ ವಾಪಸ್ ಪಡೆಯಲು ಸರ್ಕಾರ ಚಿಂತನೆ ನಡೆಸುತ್ತಿದೆ. ಯಾವ ಶೈಕ್ಷಣಿಕ ವರ್ಷದಿಂದ ಜಾರಿ ಮಾಡ್ಬೇಕು ಅನ್ನೋ ಬಗ್ಗೆ ಸರ್ಕಾರದ ಹಂತದಲ್ಲಿ ಚರ್ಚಿಸ್ತೇನೆ. ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಲಿದ್ದೇವೆ ಅಂತಷ್ಟೇ ಹೇಳಿದ್ದು. ಇನ್ನೂ ನಿಷೇಧ ಮಾಡಿರೋದನ್ನು ವಾಪಸ್ ತೆಗೆದುಕೊಂಡಿಲ್ಲ ಎಂದಿದ್ದಾರೆ.


























