ನವದೆಹಲಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು (ಗುರುವಾರ) ಮಧ್ಯಂತರ ಬಜೆಟ್ ಮಂಡಿಸಲಿದ್ದಾರೆ.
ಹಣಕಾಸು ಸಚಿವರಾಗಿ ಸೀತಾರಾಮನ್ ಮಂಡಿಸಲಿರುವ 6ನೇ ಬಜೆಟ್ ಇದಾಗಿದೆ. ಅಲ್ಲದೇ ಪ್ರಧಾನಿ ಮೋದಿ ಸರ್ಕಾರದ 2ನೇ ಅವಧಿಯ ಕೊನೆಯ ಬಜೆಟ್ ಕೂಡ ಆಗಲಿದೆ.
ಲೋಕಸಭೆ ಚುನಾವಣೆಯ ನಂತರ ಸರ್ಕಾರ ರಚನೆಯಾಗುವವರೆಗೆ ಮಧ್ಯಂತರ ಬಜೆಟ್ ಮಧ್ಯಂತರ ಅವಧಿಯ ಹಣಕಾಸಿನ ಅಗತ್ಯಗಳನ್ನು ನೋಡಿಕೊಳ್ಳುತ್ತದೆ. ಹೊಸ ಸರ್ಕಾರದಿಂದ ಪೂರ್ಣ ಪ್ರಮಾಣದ ಬಜೆಟ್ ಮಂಡಿಸಲಾಗುವುದು.
ಲೋಕಸಭೆ ಮತ್ತು ರಾಜ್ಯಸಭೆಯ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ ಮಾಡುವ ಮೂಲಕ ಸಂಸತ್ತಿನ ಬಜೆಟ್ ಅಧಿವೇಶನ ಬುಧವಾರ ಪ್ರಾರಂಭವಾಯಿತು. ರಾಷ್ಟ್ರಪತಿ ಭಾಷಣದಲ್ಲಿ, 2023 ದೇಶಕ್ಕೆ ಐತಿಹಾಸಿಕ ವರ್ಷವಾಗಿದೆ. ದೇಶವು ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯ ವೇಗವನ್ನು ಮುಂದುವರೆಸಿದೆ ಎಂದು ಹೇಳಿದ್ದರು.
ಈ ಏಪ್ರಿಲ್ನಲ್ಲಿ ಪ್ರಾರಂಭವಾಗುವ 2024-25 ರ ಹಣಕಾಸು ವರ್ಷದಲ್ಲಿ ಭಾರತದ ಆರ್ಥಿಕತೆಯು ಶೇ.7 ರ ಸಮೀಪಕ್ಕೆ ಬರುವ ನಿರೀಕ್ಷೆಯಿದೆ ಎಂದು ಹಣಕಾಸು ಸಚಿವಾಲಯವು ಪರಿಶೀಲನಾ ವರದಿಯಲ್ಲಿ ತಿಳಿಸಿದೆ.
ಭಾರತದ ಆರ್ಥಿಕತೆಯು 2022-23ರಲ್ಲಿ ಶೇ.7.2 ಮತ್ತು 2021-22ರಲ್ಲಿ ಶೇ.8.7ರಷ್ಟು ಬೆಳವಣಿಗೆ ಕಂಡಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ 2023-24 ರಲ್ಲಿ ಭಾರತದ ಆರ್ಥಿಕತೆಯು ಶೇ.7.3 ಬೆಳವಣಿಗೆ ನಿರೀಕ್ಷಿಸಲಾಗಿದೆ. ಇದು ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯಾಗಿದೆ.


























