ಬೆಂಗಳೂರು : ರಾಜ್ಯಾದ್ಯಂತ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಮತ್ತು ತಂಬಾಕು ರಹಿತ ಹುಕ್ಕಾ ಬಳಕೆ ಮತ್ತು ಮಾರಾಟ, ಸೇವನೆಯನ್ನ ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಿ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.
ಸಾರ್ವಜನಿಕರ ಆರೋಗ್ಯದ ವಿಷಯದಲ್ಲಿ ಕಳವಳ ವ್ಯಕ್ತಪಡಿಸುತ್ತಿದ್ದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಹುಕ್ಕಾ ನಿಷೇಧಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ತಂಬಾಕು ರಹಿತ ಎಂದು ಹೇಳಿಕೊಂಡು ನಡೆಯುತ್ತಿದ್ದ ಅನಾರೋಗ್ಯಕರ ಹುಕ್ಕಾ ಹಾವಳಿಗೆ ಕಡಿವಾಣ ಹಾಕಿದ್ದಾರೆ.
ಸಾರ್ವಜನಿಕರ ಆರೋಗ್ಯವನ್ನು ಕಾಪಾಡಲು ಮತ್ತು ತಂಬಾಕು ಸಂಬಂಧಿತ ರೋಗಗಳ ಹೆಚ್ಚಳವನ್ನು ತಡೆಯುವ ನಿಟ್ಟಿನಲ್ಲಿ ಹುಕ್ಕಾ ಉತ್ಪನ್ನಗಳ ಮಾರಾಟ, ಸೇವನೆಯನ್ನ ನಿಷೇಧಿಸುತ್ತಿರುವುದಾಗಿ ಆರೋಗ್ಯ ಇಲಾಖೆ ತನ್ನ ಆದೇಶದಲ್ಲಿ ತಿಳಿಸಿದೆ.
ವಿಶ್ವ ಆರೋಗ್ಯ, ಸಂಸ್ಥೆ ನಡೆಸಿರುವ ಗ್ಲೋಬಲ್ ಅಡಲ್ಸ್ ಟೊಬ್ಯಾಕೋ ಸರ್ವೇ 2016-17, ಅಧ್ಯಯನದ ಪ್ರಕಾರ, ಕರ್ನಾಟಕದಲ್ಲಿ 22.8% ವಯಸ್ಕರು ತಂಬಾಕು ಉತ್ಪನ್ನಗಳನ್ನು ಸೇವಿಸುತ್ತಿದ್ದಾರೆ. ಈ ಪೈಕಿ 8.8% ರಷ್ಟು ಮಂದಿ ಧೂಮಪಾನಿಗಳಾಗಿದ್ದಾರೆ. ಕರ್ನಾಟಕದಲ್ಲಿ 23.9% ವಯಸ್ಕರು ಸಾರ್ವಜನಿಕ ಸ್ಥಳಗಳಲ್ಲಿ ಒಟ್ಟಾಗಿ ಧೂಮಪಾನ ಮಾಡುತ್ತಾರೆ. ಇದು ರಾಜ್ಯದಲ್ಲಿ ತಂಬಾಕು ಸೇವನೆಯ ವ್ಯಾಪಕ ಅಪಾಯವನ್ನು ತೆರೆದಿಟ್ಟಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಹುಕ್ಕಾ ಉತ್ಪನ್ನಗಳ ಮಾರಾಟವನ್ನು ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಲಾಗಿದೆ.
ಯುವ ಜನತೆಯು ಇತ್ತೀಚಿನ ವರ್ಷಗಳಲ್ಲಿ ತಂಬಾಕು ಉತ್ಪನ್ನಗಳತ್ತ ಹೆಚ್ಚು ಆಕರ್ಷಿತರಾಗುತ್ತಿರುವುದು ವಿಶ್ವ ಆರೋಗ್ಯ, ಸಂಸ್ಥೆ ಗ್ಲೋಬಲ್ ಯೂತ್ ಟೊಬ್ಯಾಕೋ ಸರ್ವೇ (2019)ಯಲ್ಲಿ ದೃಢಪಟ್ಟಿದೆ. 13 ರಿಂದ15 ವರ್ಷ ವಯಸ್ಸಿನ ಸುಮಾರು ಐದನೇ ಒಂದು ಭಾಗದಷ್ಟು ವಿದ್ಯಾರ್ಥಿಗಳು ಹಲವು ಬಗೆಯ ತಂಬಾಕು ಸೇವಿಸುತ್ತಿದ್ದಾರೆ. ತಂಬಾಕು ಒಳಗೊಂಡ ಶಿಶಾ ಮತ್ತು “ಹರ್ಬಲ್” ಶಿಶಾ ಇವೆಲ್ಲವೂ ವಿಷಕಾರಿ ಹೊಗೆಯನ್ನು ಹೊರಸೂಸುವುದರಿಂದ ಕ್ಯಾನ್ಸರ್, ಹೃದ್ರೋಗ ಹಾಗೂ ಶ್ವಾಸಕೋಶದ ಕಾಯಿಲೆಗಳಿಗೆ ಕಾರಣವಾಗುತ್ತದೆ ಎಂಬ ಮಹತ್ವದ ಅಂಶ ಸಂಶೋಧನೆಯಿಂದ ತಿಳಿದುಬಂದಿದೆ.
ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು, ಪಬ್‌ಗಳು, ಬಾರ್‌ಗಳು, ಲಾಂಜ್‌ಗಳು, ಕೆಫೆಗಳು, ಕ್ಲಬ್‌ಗಳು ಮತ್ತು ಇತರ ಸ್ಥಳಗಳಲ್ಲಿ ಹುಕ್ಕಾ ಬಳಕೆ, ಮಾರಾಟ ಮತ್ತು ಸೇವೆಯ ನಿಷೇಧವು ಯುವಜನರನ್ನು ಮಾದಕ ವ್ಯಸನದಿಂದ ಮತ್ತು ತಂಬಾಕಿನ ಹಾನಿಕಾರಕ ಪರಿಣಾಮಗಳಿಂದ ರಕ್ಷಿಸುವಲ್ಲಿ ನಿರ್ಣಾಯಕ ಹಂತವಾಗಿದೆ.


























