ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಸಂತ ಜೆರೋಸಾ ಶಾಲೆಯ ಶಿಕ್ಷಕಿ ಸಿಸ್ಟರ್ ಪ್ರಭಾ ಅವರು ಹಿಂದೂ ದೇವರಿಗೆ ಅವಮಾನ ಮಾಡಿದ್ದಾರೆ ಎಂದು ಕೇಳಿ ಬಂದ ಗಂಭೀರ ಆರೋಪ ಸಂಬಂಧ ಸಮಗ್ರ ತನಿಖೆಗೆ ಐಎಎಸ್ ನೇತೃತ್ವದಲ್ಲಿ ತನಿಖೆಗೆ ಆದೇಶಿಸಲಾಗಿದೆ.
ಈ ಬಗ್ಗೆ ಆರೋಗ್ಯ ಸಚಿವರೂ ಆಗಿರುವ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಅವರು, ಜೆರೋಸಾ ಶಾಲೆ ಶಿಕ್ಷಕಿಯಿಂದ ಹಿಂದೂ ಧರ್ಮದ ಅವಹೇಳನ ಆರೋಪ ಸಂಬಂಧ ಘಟನೆ ಬಗ್ಗೆ ಸಮಗ್ರ ತನಿಖೆ ನಡೆಸಲು ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.
ಐಎಎಸ್ ಅಧಿಕಾರಿ ಡಾ.ಎಸ್. ಆಕಾಶ್ ನೇತೃತ್ವದಲ್ಲಿ ತನಿಖೆ ನಡೆಯಲಿದೆ ಎಂದರು.
ದೂರು ಆಧರಿಸಿ ಎಫ್ಐಆರ್ ದಾಖಲಿಸಲಾಗಿದೆ. ಶೀಘ್ರದಲ್ಲೇ ಸತ್ಯಾಂಶ ತಿಳಿಯುತ್ತದೆ. ತುರ್ತಾಗಿ ತನಿಖೆ ಮಾಡಿ ವರದಿ ಸಲ್ಲಿಸಲು ಸೂಚನೆ ನೀಡಲಾಗಿದೆ. ನಮ್ಮ ಅಭಿಪ್ರಾಯ, ಅವರ ಅಭಿಪ್ರಾಯ ಏನೇ ಇರಲಿ, ಕಾನೂನು ಮತ್ತು ಸಂವಿಧಾನ ಮುಖ್ಯ. ಶಾಸಕರು ಮತ್ತು ಇತರರ ನಡವಳಿಕೆಯಿಂದ ನಮಗೆ ಬಹಳಷ್ಟು ನೋವಾಗಿದೆ. ಧಾರ್ಮಿಕವಾಗಿ ಸಮಾಜವನ್ನು ಇಬ್ಬಾಗ ಮಾಡಲು ಹೋಗಿದ್ದಾರೆ ಎಂದರು.
ನಾಳೆ ರಾಜ್ಯ ಸರ್ಕಾರದ ‘ಆಶಾಕಿರಣ’ ಕಾರ್ಯಕ್ರಮಕ್ಕೆ ಚಾಲನೆ
ನಾಳೆ ರಾಜ್ಯ ಸರ್ಕಾರದ ‘ಆಶಾಕಿರಣ’ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದಾರೆ. ಹಾವೇರಿಯಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತಿದೆ ಎಂದು ದಿನೇಶ್ ಗುಂಡೂರಾವ್ ಹೇಳಿದರು.
‘ನಿಮ್ಮ ಮನೆ ಬಾಗಿಲಿಗೆ ಕಣ್ಣಿನ ಆರೈಕೆ’ ಧ್ಯೇಯ ವಾಕ್ಯ ಹೊಂದಿರುವ ಯೋಜನೆ ಇದಾಗಿದೆ. ಮಗುವಿನಿಂದ ಹಿಡಿದು ಎಲ್ಲಾ ವಯೋಮಾನದವರಿಗೆ ಕಣ್ಣಿನ ತಪಾಸಣೆ ನಡೆಸಲಾಗುತ್ತದೆ ಎಂದರು.
ದೃಷ್ಟಿದೋಷ ಇರುವವರಿಗೆ ಉಚಿತ ಕನ್ನಡಕ ವಿತರಣೆ ಮಾಡುತ್ತೇವೆ. ಅವಶ್ಯಕತೆ ಇರುವವರಿಗೆ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ಮಾಡುತ್ತೇವೆ. ಮೊದಲ ಹಂತದಲ್ಲಿ ಚಿಕ್ಕಬಳ್ಳಾಪುರ, ಕಲಬುರಗಿ, ಚಾಮರಾಜನಗರ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಈ ಯೋಜನೆ ಜಾರಿ ಮಾಡುತ್ತಿದ್ದೇವೆ. ಎರಡನೇ ಹಂತದಲ್ಲಿ ಚಿತ್ರದುರ್ಗ, ಮಂಡ್ಯ, ರಾಯಚೂರು, ಉತ್ತರಕನ್ನಡ ಜಿಲ್ಲೆಗಳಲ್ಲಿ ಆಶಾಕಿರಣ ಅಭಿಯಾನ ಆರಂಭವಾಗುತ್ತದೆ. ಮುಂದೆ ರಾಜ್ಯದ ಉಳಿದ ಜಿಲ್ಲೆಗಳಲ್ಲೂ ಈ ಯೋಜನೆ ವಿಸ್ತರಣೆ ಆಗಲಿದೆ ಎಂದರು.



























