ಮಂಗಳೂರು : ಶಿಕ್ಷಕಿಯಿಂದ ಹಿಂದೂ ಧರ್ಮಕ್ಕೆ ಅವಹೇಳನ ಆರೋಪ ಹಿನ್ನೆಲೆಯಲ್ಲಿ ಶಾಲಾ ಬಳಿ ಪ್ರತಿಭಟಿಸಿದ ಬಿಜೆಪಿ ಶಾಸಕ ಡಾ.ವೈ ಭರತ್ ಶೆಟ್ಟಿ, ವೇದವ್ಯಾಸ್ ಕಾಮತ್ ಹಾಗೂ ವಿಹೆಚ್ಪಿ ಮುಖಂಡರಾದಂತ ಶರಣ್ ಪಂಪ್ವೆಲ್ ಸೇರಿದಂತೆ ಐವರ ಮೇಲೆ ಎಫ್ಐಆರ್ ದಾಖಲು ಮಾಡಲಾಗಿತ್ತು. ಇದನ್ನು ವಿರೋಧಿಸಿ ವಿಶ್ವ ಹಿಂದೂ ಪರಿಷತ್, ಭಜರಂಗದಳದ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ.

ಬಿಜೆಪಿ ನಾಯಕರ ಮೇಲೆ ಇರುವಂತಹ ಎಫ್ಐಆರ್ ಅನ್ನು ಹಿಂಪಡೆಯುವಂತೆ ಒತ್ತಾಯಿಸಿ ಕಾರ್ಯಕರ್ತರು ಮಂಗಳೂರಿನ ತಾಲೂಕು ಕಚೇರಿ ಎದುರು ಪ್ರತಿಭಟನೆ ಮಾಡುತ್ತಿದ್ದಾರೆ. ಈ ಹಿಂದೆ ಎಫ್ಐಆರ್ ಹಿಂಪಡೆಯುವಂತೆ ಮನವಿಯನ್ನು ನೀಡಲಾಗಿತ್ತು. ಆದರೆ ಇದನ್ನು ಪರಿಗಣಿಸದ ಹಿನ್ನೆಲೆಯಲ್ಲಿ ಇಂದು ಹೋರಾಟ ನಡೆಸಲಾಗುತ್ತಿತ್ತು. ಈ ವೇಳೆ ಕಾರ್ಯಕರ್ತರು ಜಿಲ್ಲಾಧಿಕಾರಿ ಮತ್ತು ಕಮಿಷನರ್ ಕಚೇರಿಗೆ ನುಗ್ಗಲು ಯತ್ನಿಸಿದ್ದಾರೆ.
ಈ ಸಂಬಂಧ ಕಾರ್ಯಕರ್ತರು ಮತ್ತು ಪೊಲೀಸರ ಮಧ್ಯೆ ನೂಕಾಟ, ತಳ್ಳಾಟ ನಡೆದಿದೆ. ಪ್ರತಿಭಟನೆ ತೀವ್ರ ಸ್ವರೂಪ ಪಡೆದ ಹಿನ್ನೆಲೆಯಲ್ಲಿ ಕಚೇರಿಗೆ ನುಗ್ಗಲು ಯತ್ನಿಸಿದ 100ಕ್ಕೂ ಹೆಚ್ಚು ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದು ವಾಹನದಲ್ಲಿ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ ಎಂದು ತಿಳಿದು ಬಂದಿದೆ.