ನವದೆಹಲಿ : ಬಹು ನಿರೀಕ್ಷಿತ ಲೋಕಸಭಾ ಚುನಾವಣೆಯ ದಿನಾಂಕ ಘೋಷಣೆಗೆ ಮುಹೂರ್ತ ನಿಗದಿಯಾಗಿದೆ.
ನಾಳೆ ಮಧ್ಯಾಹ್ನ 3 ಗಂಟೆಗೆ ಕೇಂದ್ರ ಚುನಾವಣಾ ಆಯುಕ್ತರಿಂದ ಸುದ್ದಿಗೋಷ್ಠಿ ನಡೆಯಲಿದ್ದು, ನಾಳೆಯೇ ಲೋಕಸಭಾ ಚುನಾವಣೆಗೆ ದಿನಾಂಕ ಫಿಕ್ಸ್ ಆಗಲಿದೆ.
ದೆಹಲಿಯ ವಿಜ್ಞಾನ್ ಭವನದಲ್ಲಿ ನಾಳೆ ಮಧ್ಯಾಹ್ನ 3 ಗಂಟೆಗೆ ಕೇಂದ್ರ ಚುನಾವಣಾ ಆಯೋಗ ಸುದ್ದಿಗೋಷ್ಟಿ ನಡೆಸಲಿದೆ. ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರ ನೇತೃತ್ವದ ಚುನಾವಣಾ ಆಯೋಗ ಲೋಕಸಭಾ ಚುನಾವಣೆಯ ದಿನಾಂಕ ಘೋಷಣೆ ಮಾಡಲಿದೆ ಎನ್ನಲಾಗಿದೆ.
ಇಂದು ಕೇಂದ್ರ ಚುನಾವಣಾ ಆಯೋಗದ ಆಯುಕ್ತರಾಗಿ ಸುಖಬೀರ್ ಸಿಂಗ್ ಸಂಧು ಮತ್ತು ಜ್ಞಾನೇಶ್ ಕುಮಾರ್ ಅವರು ಅಧಿಕಾರ ಸ್ವೀಕರಿಸಿದ್ದಾರೆ. ಮುಖ್ಯಚುನಾವಣಾ ಆಯುಕ್ತ ರಾಜೀವ್ ಕುಮಾರ್ ಜೊತೆ ಮಹತ್ವದ ಸಭೆ ನಡೆಸಿದ್ದು, ನಾಳೆ ಮಧ್ಯಾಹ್ನ 3 ಗಂಟೆಗೆ ಚುನಾವಣೆ ದಿನಾಂಕ ಘೋಷಣೆ ಮಾಡುವ ಸುದ್ದಿಗೋಷ್ಟಿ ನಿಗದಿ ಮಾಡಲಾಗಿದೆ.
ಚುನಾವಣೆ ದಿನಾಂಕ ಘೋಷಣೆಯ ಜೊತೆಗೆ ನಾಳೆ ಮಧ್ಯಾಹ್ನದಿಂದಲೇ ಲೋಕಸಭಾ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರಲಿದೆ.

























