ಬಂಟ್ವಾಳ : ವಂಚನೆ ಆರೋಪ ಎದುರಿಸುತ್ತಿದ್ದ ಯುವಕನೋರ್ವನ ಮೃತದೇಹ ಬಂಟ್ವಾಳದ ವಾಮದಪದವಿನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ವಾಮದಪದವು ತಿಮರಡ್ಡ ನಿವಾಸಿ ಪದ್ಮನಾಭ ಸಾಮಂತ ಆತ್ಮಹತ್ಯೆ ಮಾಡಿಕೊಂಡವರು.
ಪದ್ಮನಾಭ ಸಾಮಂತನ ವಿರುದ್ಧ ಕಳೆದರಡು ದಿನಗಳ ಹಿಂದೆ ವಂಚನೆ ಆರೋಪ ಕೇಳಿ ಬಂದಿದೆ. ಯುವಕನೋರ್ವನಿಗೆ ಸರಕಾರಿ ಉದ್ಯೋಗ ದೊರಕಿಸಿಕೊಡುವುದಾಗಿ 1.50 ಲಕ್ಷ ಹಣವನ್ನು ಪಡೆದು ವಂಚಿಸಿರುವ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಕುರಿತು ಮೃತ ಪದ್ಮನಾಭ ಸಾಮಂತ ವಿಚಾರಣೆಗೆ ಹಾಜರಾಗುವುದಾಗಿ ಪೊಲೀಸರಿಗೆ ತಿಳಿಸಿದ್ದ. ಆದರೆ ಯುವಕ ಕಳೆದ ಮೂರು ದಿನಗಳಿಂದ ಠಾಣೆಗೆ ಹಾಜರಾಗಿರಲಿಲ್ಲ. ದೂರವಾಣಿ ಕರೆ ಮಾಡಿದರೂ ಸ್ವೀಕರಿಸುತ್ತಿರಲಿಲ್ಲ ಎನ್ನಲಾಗಿತ್ತು.
ಯಾರ ಸಂಪರ್ಕಕ್ಕೂ ಸಿಗದೆ, ನಾಪತ್ತೆಯಾಗಿದ್ದ ಯುವಕನ ಮೃತದೇಹ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಮನೆಯ ಪಕ್ಕದ ಗುಡ್ಡವೊಂದರಲ್ಲಿ ಪತ್ತೆಯಾಗಿದೆ. ಪೊಲೀಸರು ಸ್ಥಳಕ್ಕೆ ತೆರಳಿ, ಪರಿಶೀಲನೆ ನಡೆಸಿದ್ದಾರೆ. ಅಸಹಜ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ.
ಪ್ರಾಥಮಿಕ ಮಾಹಿತಿ ಪ್ರಕಾರ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದ್ದು, ನಿಜಾಂಶವೇನು ಎನ್ನುವುದು ಮರಣೋತ್ತರ ಪರೀಕ್ಷೆಯ ಬಳಿಕ ತಿಳಿದುಬರಬೇಕಾಗಿದೆ.