ಮಂಗಳೂರು : ವೈಯಕ್ತಿಕ ಕಾರಣಗಳ ಹಿನ್ನೆಲೆಯಲ್ಲಿ ಚುನಾವಣಾ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳೂರು ನಗರದ ಜಿಲ್ಲಾಧಿಕಾರಿಯವರ ಕಚೇರಿ ಆವರಣದಲ್ಲಿ ಮಂಗಳವಾರ ನಡೆದಿದೆ.
ಶ್ರೀಧರ್ ಹೆಗಡೆ ಆತ್ಮಹತ್ಯೆಗೆ ಯತ್ನಿಸಿದವರು.

ಶ್ರೀಧರ್ ಹೆಗಡೆ ಅವರು ಆತ್ಮಹತ್ಯೆಗೆ ಯತ್ನಿಸಿದ ಕೂಡಲೇ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಚಿಕಿತ್ಸೆ ನೀಡಿದ ವೈದ್ಯರು ಆರೋಗ್ಯ ಸ್ಥಿರವಾಗಿದೆ ಎಂದು ತಿಳಿಸಿದ್ದಾರೆ.
ಶ್ರೀಧರ್ ಹೆಗಡೆ ಅವರು ಮಂಗಳೂರು ನಗರದ ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಯಲ್ಲಿರುವ ಏಕಗವಾಕ್ಷಿ ಪದ್ಧತಿ ತಂಡದ ಸದಸ್ಯರಾಗಿದ್ದರು. 2019ರಿಂದ ಬೆಳ್ತಂಗಡಿಯ ಕಡಿರು ಉದ್ಯಾವರ ಪಂಚಾಯಿತಿ ವ್ಯಾಪ್ತಿಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಇವರ ಜಾಗಕ್ಕೆ ಮತ್ತೊಬ್ಬರು ವರ್ಗಾವಣೆಯಾದ ಹಿನ್ನಲೆಯಲ್ಲಿ ಕಳೆದ ಫೆಬ್ರವರಿ ಹಾಗೂ ಮಾರ್ಚ್ ನಿಂದ ಸ್ಥಳ ನಿರೀಕ್ಷಣೆಯಲ್ಲಿದ್ದರು.

ಇನ್ನು ಅವರ ಪತ್ನಿ ಜಯಂತಿ ಸ್ಟಾಫ್ ನರ್ಸ್ ಆಗಿ ಬೆಳ್ತಂಗಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಣಧಿಕಾರಿ ಡಾ. ಆನಂದ್, ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ತಿಮ್ಮಯ್ಯ, ಜಿಲ್ಲಾ ಪಂಚಾಯತ್ ನ ಲೆಕ್ಕಾಧೀಕ್ಷ ಬಾಲು ಡಿ.ಎಂ. ಸೇರಿದಂತೆ ಹಲವು ಅಧಿಕಾರಿಗಳು, ಸಿಬ್ಬಂದಿ ಚಿಕಿತ್ಸೆಗೆ ನೆರವಾದರು.

























