ಕನ್ನಡದ ಹಿರಿಯ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ಅವರು ನಿಧನರಾಗಿದ್ದಾರೆ. 81 ವರ್ಷದ ದ್ವಾರಕೀಶ್ ಅವರು, ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ದ್ವಾರಕೀಶ್ ನಿಧನಕ್ಕೆ ಕನ್ನಡ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ.
ದ್ವಾರಕೀಶ್ 1942 ಆಗಸ್ಟ್ 19ರಂದು ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಜನಿಸಿದರು. ದ್ವಾರಕೀಶ್ ತಂದೆ ಶಾಮರಾವ್ ಮತ್ತು ತಾಯಿ ಜಯಮ್ಮ. ಶಾರದ ವಿಲಾಸ್ ಮತ್ತು ಬನುಮ್ಯ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಮುಗಿಸಿದ್ದ ದ್ವಾರಕೀಶ್, ಫ್ರೌಡಶಿಕ್ಷಣದ ನಂತರ ಸಿಪಿಸಿ ಪಾಕಿಟೆಕ್ನಿಕ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಮುಗಿಸಿದರು. ನಂತರ ತಮ್ಮ ಸಹೋದರನ ಜೊತೆ ಸೇರಿ ಭಾರತ್ ಆಟೋ ಸ್ಪೇರ್ ಸ್ಟೋರ್ ಆರಂಭಿಸಿದ್ದರು. 1963ರಲ್ಲಿ ವ್ಯಾಪಾರ ಬಿಟ್ಟು ನಟನೆಯತ್ತ ಮುಖ ಮಾಡಿದ್ದರು.
1964ರಲ್ಲಿ ವೀರ ಸಂಕಲ್ಪ ಎಂಬ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ದ್ವಾರಕೀಶ್, ನಟರಾಗಿ, ಹಾಸ್ಯ ಕಲಾವಿದರಾಗಿ, ಪೋಷಕ ನಟನಾಗಿ ಈವರೆಗೂ ನೂರಾರು ಸಿನಿಮಾಗಳಲ್ಲಿ ನಟಿಸಿದ್ದರು.
ಒಂದು ಕಾಲದಲ್ಲಿ ವಿಷ್ಣುವರ್ಧನ್ ಹಾಗೂ ದ್ವಾರಕೀಶ್ ಜೋಡಿ ಕಳ್ಳ-ಕುಳ್ಳ ಎಂದೇ ಪ್ರಸಿದ್ಧವಾಗಿತ್ತು. ಇವರಿಬ್ಬರು ಉತ್ತಮ ಸ್ನೇಹಿತರಾಗಿದ್ದು, ದ್ವಾರಕೀಶ್ ವಿಷ್ಣು ಅಭಿನಯದ ಬಹುತೇಕ ಸಿನಿಮಾಗಳಲ್ಲಿ ತೆರೆಹಂಚಿಕೊಂಡಿದ್ದರು.