ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಕಳೆದ ಒಂದು ವರ್ಷದಿಂದ ಅಂತರಾಷ್ಟ್ರೀಯ ವಿಮಾನ ಸೇವೆ ಸ್ಥಗಿತಗೊಳಿಸಲಾಗಿದ್ದು, ಇದೀಗ ಅದನ್ನು ಜೂನ್ 30ರವರೆಗೆ ವಿಸ್ತರಿಸಲಾಗಿದೆ. ಅಂತಾರಾಷ್ಟ್ರೀಯ ವಾಣಿಜ್ಯ ಪ್ರಯಾಣಿಕರ ಸೇವೆಗೆ ವಿಧಿಸಲಾಗಿದ್ದ ನಿರ್ಬಂಧವನ್ನು ಜೂನ್ 30ರ ವರೆಗೆ ವಿಸ್ತರಿಸಲಾಗಿದೆ ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯ(ಡಿಜಿಸಿಎ) ಇಂದು ಅಧಿಸೂಚನೆ ಹೊರಡಿಸಿದೆ. ಅದರೂ ಗೃಹ ಸಚಿವಾಲಯದಿಂದ ಅನುಮತಿ ಪಡೆದವರು ಮಾತ್ರವೇ ವಿಮಾನದಲ್ಲಿ ಪ್ರಯಾಣಿಸಬಹುದಾಗಿದೆ ಮತ್ತು ಈ ನಿರ್ಬಂಧವೂ ಕಾರ್ಗೋ ವಿಮಾನ ಸೇವೆಗೆ ಅನ್ವಯವಾಗುವುದಿಲ್ಲ ಎಂದು ಡಿಜಿಸಿಎ ಸ್ಪಷ್ಟಪಡಿಸಿದೆ.
ಕಳೆದ ವರ್ಷ ಮಾರ್ಚ್ 25ರಂದು ಕೊರೋನಾ ವೈರಸ್ ನಿಯಂತ್ರಿಸುವುದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶಾದ್ಯಂತ ಲಾಕ್ ಡೌನ್ ಘೋಷಿಸಿದ ನಂತರ ಎಲ್ಲಾ ದೇಶಿಯ ಮತ್ತು ಅಂತರಾಷ್ಟ್ರೀಯ ವಿಮಾನ ಸೇವೆಯನ್ನು ರದ್ದುಗೊಳಿಸಲಾಗಿತ್ತು. ಮೇ 2020 ರಿಂದ ವಂದೇ ಭಾರತ್ ಮಿಷನ್ ಅಡಿಯಲ್ಲಿ ಮತ್ತು ಜುಲೈನಿಂದ ಆಯ್ದ ದೇಶಗಳೊಂದಿಗೆ ದ್ವಿಪಕ್ಷೀಯ ‘ಏರ್ ಬಬಲ್’ ವ್ಯವಸ್ಥೆಗಳ ಅಡಿಯಲ್ಲಿ ವಿಶೇಷ ಅಂತರಾಷ್ಟ್ರೀಯ ವಿಮಾನಯಾನವನ್ನು ಅನುಮತಿಸಲಾಗಿದೆ.
ಭಾರತವು ಯುನೈಟೆಡ್ ಸ್ಟೇಟ್ಸ್, ಯುನೈಟೆಡ್ ಕಿಂಗ್‌ಡಮ್, ಯುನೈಟೆಡ್ ಅರಬ್ ಎಮಿರೇಟ್ಸ್, ಕೀನ್ಯಾ, ಭೂತಾನ್ ಮತ್ತು ಫ್ರಾನ್ಸ್ ಸೇರಿದಂತೆ ಹಲವಾರು ದೇಶಗಳೊಂದಿಗೆ ಏರ್ ಬಬಲ್ ಒಪ್ಪಂದಗಳನ್ನು ರೂಪಿಸಿದೆ. ಎರಡು ದೇಶಗಳ ನಡುವಿನ ಏರ್ ಬಬಲ್ ಒಪ್ಪಂದದಡಿಯಲ್ಲಿ, ವಿಶೇಷ ಅಂತರಾಷ್ಟ್ರೀಯ ವಿಮಾನಗಳನ್ನು ತಮ್ಮ ವಿಮಾನಯಾನ ಸಂಸ್ಥೆಗಳು ಪ್ರಾಂತ್ಯಗಳ ನಡುವೆ ನಿರ್ವಹಿಸಬಹುದು.