ಮಂಗಳೂರು : ದೇಶದಲ್ಲಿ ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಪ್ರಕ್ರಿಯೆ ಶುಕ್ರವಾರ ಆರಂಭವಾಗಿದೆ. ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದೆ. ಉರಿ ಬಿಸಿಲು, ಸೆಕೆಯ ಮಧ್ಯೆ ಮತದಾರರು ಉತ್ಸಾಹದಿಂದ ಮತಗಟ್ಟೆಗಳತ್ತ ಸಾಗಿ ಬರುತ್ತಿದ್ದು, ದ.ಕ ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ದ.ಕ ಜಿಲ್ಲಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಅವರು ಮಂಗಳೂರು ನಗರದ ಕಪಿತಾನಿಯೊ 179ನೇ ಮತಗಟ್ಟೆಗೆ ಕುಟುಂಬ ಸಮೇತ ಆಗಮಿಸಿ ಸರತಿ ಸಾಲಲ್ಲಿ ನಿಂತು ತಮ್ಮ ಹಕ್ಕು ಚಲಾಯಿಸಿದರು.

ಬಿಜೆಪಿ ಅಭ್ಯರ್ಥಿ ಬ್ರಿಜೆಶ್ ಚೌಟ ಅವರು ಮಂಗಳೂರು ನಗರದ ರಥಬೀದಿಯಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮತದಾನ ಮಾಡಿದರು.
ಸಂಸದ ನಳಿನ್ ಕುಮಾರ್ ಕಟೀಲ್ ಅವರು ನಗರದ ಲೇಡಿಹಿಲ್ ಸಂತ ಅಲೋಶಿಯಸ್ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ಬಂದು ಮತ ಚಲಾಯಿಸಿದರು. ಇದೇ ಸಂದರ್ಭ ಅಲ್ಲಿ ಬಂದಿದ್ದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅವರು ಸಂಸದ ನಳಿನ್ ಕುಮಾರ್ ಕಟೀಲ್ ಅವರ ಆಶೀರ್ವಾದ ಪಡೆದ ಪ್ರಸಂಗವೂ ನಡೆಯಿತು.

ಪುತ್ತೂರು ಸೇರಿದಂತೆ ಜಿಲ್ಲೆಯ ಇತರ ಕಡೆಗಳಲ್ಲಿ ಪ್ರಮುಖರು ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದರು.


























