ಮಂಗಳೂರು : ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಮಳೆಗಾಲ ಮುಗಿಯುವವರೆಗೆ ಯಾವುದೇ ಕಾಮಗಾರಿ ನಡೆಸದಂತೆ ಆಯುಕ್ತರು ಆದೇಶಿಸಿದ್ದಾರೆ.
ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಪಾಲಿಕೆ ವ್ಯಾಪ್ತಿಯಲ್ಲಿ ಕಟ್ಟಡ ಪರವಾನಿಗೆ ಪಡೆದಂತಹ ಕಟ್ಟಡ ನಿರ್ಮಾಣದಾರರು ಯಾವುದೇ ಮುಂಜಾಗ್ರತಾ ಕ್ರಮ ಕೈಗೊಳ್ಳದೇ ಅವೈಜ್ಞಾನಿಕವಾಗಿ ಭೂ ಅಗೆತ ಹಾಗೂ ಕಟ್ಟಡ ನಿರ್ಮಾಣ ಕಾಮಗಾರಿ ಮಾಡುತ್ತಿರುವುದರಿಂದ ಭೂ ಕುಸಿತ ಉಂಟಾಗಿ ಸಾರ್ವಜನಿಕ ಆಸ್ತಿ – ಪಾಸ್ತಿಗಳಿಗೆ ಸಾಕಷ್ಟು ಹಾನಿಯುಂಟಾಗುತ್ತಿರುವ ಪ್ರಕರಣಗಳು ಕಂಡುಬಂದಿದ್ದು ಹಾಗೂ ಜೀವಹಾನಿಯೂ ಸಂಭವಿಸಿರುತ್ತದೆ.

ಈ ನಿಟ್ಟಿನಲ್ಲಿ ಪ್ರಸ್ತುತ ಮುಂಗಾರಿಗೆ ಅತ್ಯಧಿಕ ಮಳೆಯಾಗುವ ಸಾದ್ಯತೆಗಳೊಂದಿಗೆ ರೆಡ್, ಆರೆಂಜ್, ಯೆಲ್ಲೊ ಅಲರ್ಟ್ ಬಗ್ಗೆ ಹವಮಾನ ಇಲಾಖೆಯಿಂದ ನಿರಂತರವಾಗಿ ಮುನ್ಸೂಚನೆ ನೀಡುತ್ತಿದ್ದು, ಈ ಹಿನ್ನಲೆಯಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಯಾವುದೇ ಕಟ್ಟಡದ ಕಾಮಗಾರಿಯನ್ನು ಮಳೆಗಾಲ ಮುಕ್ತಾಯವಾಗುವವರೆಗೆ ನಡೆಸದಂತೆ ಹಾಗೂ ಈಗಾಗಲೇ ಪ್ರಾರಂಭಿಸಿರುವ ಕಟ್ಟಡ ನಿರ್ಮಾಣ ಕಾಮಗಾರಿಗಳನ್ನು ಅಗತ್ಯ ಮುನ್ನೆಚ್ಚರಿಕೆ ಕ್ರಮವನ್ನು ಅಳವಡಿಸಿಕೊಂಡು ಕಾಮಗಾರಿಯನ್ನು ನಿಲ್ಲಿಸುವಂತೆ ಸೂಚಿಸಿದ್ದಾರೆ.
ಈ ಬಗ್ಗೆ ಯಾವುದೇ ಉಲ್ಲಂಘನೆ ಕಂಡುಬಂದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆಯಡಿ ಸಂಬಂಧಪಟ್ಟವರ ವಿರುದ್ಧ ಕಟ್ಟುನಿಟ್ಟಾದ ಕ್ರಮ ಕೈಗೊಳ್ಳಲಾಗುವುದು ಎಂದು ಆದೇಶದಲ್ಲಿ ತಿಳಿಸಿದ್ದಾರೆ.


























