ನವದೆಹಲಿ : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ್ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಸಂಸದನಾಗಿ ಪ್ರತಿಜ್ಞಾವಿಧಿ ಸ್ವೀಕರಿಸಿದ ಕೆಲವೇ ದಿನಗಳಲ್ಲಿ ಮೊದಲ ಅಧಿವೇಶನದ ವೇಳೆ ಹಲವು ಕೇಂದ್ರ ಸಚಿವರುಗಳನ್ನು ಭೇಟಿ ಮಾಡಿ ದಕ್ಷಿಣ ಕನ್ನಡ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಮುನ್ನುಡಿ ಬರೆದಿದ್ದಾರೆ.
ಕೇಂದ್ರ ಬಂದರು, ಶಿಪ್ಪಿಂಗ್ ಮತ್ತು ಜಲಮಾರ್ಗಗಳ ಸಚಿವರಾದ ಸರ್ಬಾನಂದ ಸೋನೋವಾಲ್ ಅವರನ್ನು ಅವರ ದೆಹಲಿಯ ನಿವಾಸದಲ್ಲಿ ಭೇಟಿಯಾಗಿ ಎನ್ಎಮ್ಪಿಎ ಯ ಅಭಿವೃದ್ಧಿಯ ದೃಷ್ಟಿಯಿಂದ ಇರುವ ಸಾಧ್ಯತೆಗಳು, ಸಾಗರ್ಮಾಲಾ ಯೋಜನೆ ಅಡಿಯಲ್ಲಿ ಲಕ್ಷದ್ವೀಪಕ್ಕೆ ತೆರಳುವ ಹಡಗುಗಳಿಗೆ ಮೀಸಲಾದ ಜೆಟ್ಟಿ ಮತ್ತು ಕ್ರೂಸ್ ಟರ್ಮಿನಲ್ ನಿರ್ಮಾಣದ ಕುರಿತು ಚರ್ಚೆ ನಡೆಸಿದರು. ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವರಾದ ವಿ. ಸೋಮಣ್ಣ ಅವರನ್ನು ದೆಹಲಿಯ ಸಚಿವಾಲಯದಲ್ಲಿ ಭೇಟಿಯಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ರೈಲ್ವೆ ಯೋಜನೆಗಳ ಪ್ರಗತಿ, ಸಮಸ್ಯೆ ಮತ್ತು ಸಾಧ್ಯತೆಗಳ ಕುರಿತು ಚರ್ಚಿಸಿದ್ದಾರೆ.
ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಅವರ ದೆಹಲಿಯ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿಗೆ ಸಂಬಂಧಪಟ್ಟ ಕಾಮಗಾರಿಗಳ ಕುರಿತು ಚರ್ಚಿಸಿದ್ದು, ಶಿರಾಡಿ ಘಾಟಿಯ ಮೂಲಕ ಹಾದುಹೋಗುವ ಮಂಗಳೂರು – ಬೆಂಗಳೂರು ನಡುವಿನ ರಸ್ತೆ ಪ್ರಯಾಣದ ಅವಧಿಯನ್ನು ಕಡಿಮೆ ಮತ್ತು ಸುಗಮಗೊಳಿಸಲು ಕೈಗೊಳ್ಳಬಹುದಾದ ಯೋಜನೆಗಳ ಕುರಿತು ಅಧ್ಯಯನ ನಡೆಸುವಂತೆ ಸಂಸದರು ಕೇಳಿಕೊಂಡರು.