ಉಪ್ಪಿನಂಗಡಿ: ಪ್ರಾರಂಭದಲ್ಲಿ ರಾಜ್ಯದಲ್ಲಿ ಆಕ್ಸಿಜನ್, ವೆಂಟಿಲೇಟರ್, ಐಸಿಯು ಬೆಡ್‌ಗಳ ಬಗ್ಗೆ ಚರ್ಚೆಯಾಗುತ್ತಿತ್ತು. ಆದರೆ ಇದೀಗ ಅಂತಹ ಪರಿಸ್ಥಿತಿ ಇಲ್ಲ. ರಾಜ್ಯದಲ್ಲಿ ಎಲ್ಲೂ ಸಮಸ್ಯೆಯಾದರೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾತ್ರ ಇವುಗಳ ಸಮಸ್ಯೆ ಉಂಟಾಗಲು ಸಾಧ್ಯವಿಲ್ಲ. ಜಿಲ್ಲೆಯ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಇಲ್ಲಿ ಸಮರ್ಥವಾಗಿ ನಿರ್ವಹಣೆ ಮಾಡಲಾಗಿದೆ ಎಂದು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಶ್ಲಾಘನೆ ವ್ಯಕ್ತಿಪಡಿಸಿದರು.
ಕೆನರಾ ಬ್ಯಾಂಕ್‌ನ ಸಹಭಾಗಿತ್ವದಲ್ಲಿ ಉಪ್ಪಿನಂಗಡಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ 43 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾಗುವ ಆಕ್ಸಿಜನ್ ಉತ್ಪಾದನಾ ಘಟಕದ ಕಾಮಗಾರಿಗೆ ಚಾಲನೆ ನೀಡಿದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ದ.ಕ. ಜಿಲ್ಲೆಯಲ್ಲಿ 7 ತಾಲೂಕಿನ 9 ಆರೋಗ್ಯ ಕೇಂದ್ರಗಳಲ್ಲಿ ಆಕ್ಸಿಜನ್ ಉತ್ಪಾದನೆ ಮಾಡಲು ವ್ಯವಸ್ಥೆ ಮಾಡಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರು ಜಿಲ್ಲೆಯಲ್ಲಿಯೇ ನಿಂತು ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದುಕೊಂಡು ಸಮರ್ಪಕ ಯೋಜನೆ ರೂಪಿಸಿದ್ದು ಹಾಗೂ ಜಿಲ್ಲೆಯ ಶಾಸಕರ ಕ್ರಿಯಾಶೀಲತೆಯ ಕೆಲಸವೇ ಇದಕ್ಕೆ ಕಾರಣ ಎಂದರು.
ಈ ಸಂದರ್ಭ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಪುತ್ತೂರು ಶಾಸಕ ಸಂಜೀವ ಮಠಂದೂರು ನಗರಸಭಾ ಅಧ್ಯಕ್ಷ ಜೀವಂದರ್ ಜೈನ್, ಪೂಡಾ ಅಧ್ಯಕ್ಷ ಭಾಮಿ ಅಶೋಕ್ ಶೆಣೈ, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ತಾಲೂಕ್ ಆರೋಗ್ಯಾಧಿಕಾರಿ ಅಶೋಕ್ ಮತ್ತಿತರು ಉಪಸ್ಥಿತರಿದ್ದರು.