ಹಾಸನ : ಭಾರೀ ಮಳೆಗೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಎತ್ತಿನಹಳ್ಳದ ಬಳಿ ಏಕಾಏಕಿ ಗುಡ್ಡ ಕುಸಿದಿದ್ದು, ಮತ್ತೆ ಶಿರಾಡಿ ಘಾಟ್ ನ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಂಚಾರ ಸ್ಥಗಿತವಾಗಿದೆ.
ಒಂದು ಗಂಟೆಯಿಂದಲೂ ಕಿಲೋಮೀಟರ್ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಂತಿದೆ. ಇನ್ನು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಸಿಬ್ಬಂದಿಗಳು ಮಣ್ಣು ತೆರವು ಮಾಡುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.
ಜು.18 ರಂದು ಸಕಲೇಶಪುರ ತಾಲೂಕಿನ ದೊಡ್ಡತಪ್ಲು ಬಳಿಯ ಶಿರಾಡಿಘಾಟ್ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಗುಡ್ಡ ಕುಸಿದಿತ್ತು. ಅದೃಷ್ಟವಶಾತ್ ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಿಂದ ಬಚಾವ್ ಆಗಿದ್ದರು. ಬಳಿಕ ಗುಡ್ಡ ಕುಸಿತದಿಂದ ಶಿರಾಡಿಘಾಟ್ನಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಲಾಗಿತ್ತು. ನಂತರ ಮಾರನೇ ದಿನ ಜು.19 ರಂದು ಶಿರಾಡಿ ಘಾಟ್ ಸಂಚಾರ ಬಂದ್ ಆದೇಶವನ್ನು ಜಿಲ್ಲಾಡಳಿತ ಹಿಂಪಡೆದು ಸಂಚಾರಕ್ಕೆ ಅನುವುಮಾಡಿಕೊಟ್ಟಿತ್ತು.
ಕೆಲವು ಷರತ್ತುಗಳಡಿ ಸಂಚಾರಕ್ಕೆ ಅವಕಾಶ ನೀಡಿತ್ತು. ಅಂದರೆ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟಿತ್ತು. ಮಂಗಳೂರು-ಬೆಂಗಳೂರು ನಡುವೆ ವಾಹನ ಸಂಚಾರ ಸಂಪೂರ್ಣ ನಿರ್ಬಂಧದಿಂದ ದೊಡ್ಡ ಸಮಸ್ಯೆ ಆದ ಹಿನ್ನೆಲೆಯಲ್ಲಿ ಸಂಚಾರಕ್ಕೆ ಅವಕಾಶ ಕಲ್ಪಿಸಿತ್ತು. ಇದೀಗ ಮತ್ತೆ ಗುಡ್ಡ ಕುಸಿದಿದ್ದು, ಮುನ್ನೆಚ್ಚರಿಕೆಯಾಗಿ ಸಂಚಾರವನ್ನು ನಿಷೇಧಿಸಲಾಗಿದೆ.