ಬೆಂಗಳೂರು : ರಾಮನಗರ ಜಿಲ್ಲೆಯ ಹೆಸರು ಬದಲಾವಣೆಗೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದ್ದು, ರಾಮನಗರವನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಾಕರಣ ಮಾಡಲಾಗಿದೆ.
ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಮತ್ತು ಸಂಸದೀಯ ಸಚಿವ ಎಚ್ ಕೆ ಪಾಟೀಲ್ ಅವರು, ‘ಜನರ ಅಪೇಕ್ಷೆಯಂತೆ ರಾಮನಗರ ಜಿಲ್ಲೆಯ ಹೆಸರನ್ನು ಬದಲಾವಣೆ ಮಾಡಲಾಗಿದೆ. ಇದರಲ್ಲಿ ಬೇರೆ ಯಾವುದೇ ಉದ್ದೇಶ ಇಲ್ಲ’ ಎಂದರು.
ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ಅವರನ್ನು ರಾಮನಗರ ಜಿಲ್ಲೆಯ ಕಾಂಗ್ರೆಸ್ ನಾಯಕರ ನಿಯೋಗ ಭೇಟಿಯಾಗಿತ್ತು. ಜಿಲ್ಲೆಯ ಅಭಿವೃದ್ದಿಯ ದೃಷ್ಟಿಯಿಂದ ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಎಂದು ಬದಲಾವಣೆ ಮಾಡಬೇಕು ಎಂದು ಮನವಿ ಮಾಡಿತ್ತು. ಇದೀಗ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದರು.