ಬೆಂಗಳೂರು : ಬಸವೇಶ್ವರನಗರ ಠಾಣೆ ಮುಂದೆ ಅಕ್ರಮವಾಗಿ ಗುಂಪು ಸೇರಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದ ಆರೋಪದ ಮೇರೆಗೆ ಮಾಜಿ ಸಂಸದ ಪ್ರತಾಪ್ ಸಿಂಹ, ಶಾಸಕ ಹರೀಶ್ ಪೂಂಜಾ ಸೇರಿ ಹಲವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಪುನೀತ್ ಕೆರೆಹಳ್ಳಿ ಮೇಲೆ ವಿಜಯನಗರ ಉಪವಿಭಾಗದ ಎಸಿಪಿ ಚಂದನ್ ಕುಮಾರ್ ಹಲ್ಲೆ ನಡೆಸಿದ್ದಾರೆ ಎಂಬ ಆರೋಪದ ಮೇರೆಗೆ ದೂರು ಸಲ್ಲಿಸಲು ಠಾಣೆ ಮುಂದೆ ಮಾಜಿ ಸಂಸದರ ನೇತೃತ್ವದಲ್ಲಿ ನಡೆದ ಪ್ರತಿಭಟನೆಗೆ ನೂರಾರು ಮಂದಿ ಸೇರಿದ್ದರು. ಬಸವೇಶ್ವರ ನಗರ ಠಾಣೆ ಮುಂದೆ ಪುನೀತ್ ಕೆರೆಹಳ್ಳಿ, ಶಾಸಕ ಹರೀಶ್ ಪೂಂಜಾ ಸೇರಿದಂತೆ ಹಲವು ಮಂದಿ ಹೈಡ್ರಾಮಾ ಸೃಷ್ಟಿಸಿದ್ದರು. ಪೊಲೀಸ್ ಕಸ್ಟಡಿಯಲ್ಲಿದ್ದಾಗ ಹಲ್ಲೆ ನಡೆಸಿ, ಅವಾಚ್ಯವಾಗಿ ನಿಂದಿಸಲಾಗಿದೆ ಎಂದು ಪ್ರತಿಭಟನಾನಿರತರು ಆರೋಪಿಸಿದರು.
ಅನುಮತಿ ಪಡೆಯದೆ ಠಾಣೆ ಮುಂದೆ ನೂರಾರು ಮಂದಿ ಅಕ್ರಮವಾಗಿ ಗುಂಪುಗೂಡಿ ಶಾಂತಿ ಸುವ್ಯವಸ್ಥೆ ಪಾಲನೆಗೆ ಧಕ್ಕೆ ತಂದ ಆರೋಪದ ಅನ್ವಯ ಸುಮೋಟೋ ಪ್ರಕರಣ ದಾಖಲಿಸಲಾಗಿದೆ.
ಪುನೀತ್ ಕೆರೆಹಳ್ಳಿ ಮೊದಲ ಆರೋಪಿಯಾಗಿದ್ದಾರೆ. ಪ್ರತಾಪ್ ಸಿಂಹ ಹಾಗೂ ಶಾಸಕ ಹರೀಶ್ ಪೂಂಜಾ ಅವರನ್ನು ಆರೋಪಿಗಳನ್ನಾಗಿ ಪರಿಗಣಿಸಿದ್ದು, ಹೆಚ್ಚಿನ ತನಿಖೆ ಮುಂದುವರಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.