ವೇಣೂರು : ಕಾಲೇಜಿಗೆ ಹೋಗಿ ಹಿಂತಿರುಗುತ್ತಿದ್ದ ವಿದ್ಯಾರ್ಥಿನಿಯನ್ನು ರಸ್ತೆಯ ನಿರ್ಜನ ಪ್ರದೇಶದಲ್ಲಿ ತಡೆದು ಹಲ್ಲೆ ನಡೆಸಿ, ಅಸಭ್ಯವಾಗಿ ನಡೆದುಕೊಂಡಿದ್ದಲ್ಲದೆ, ಕೊಲೆ ಬೆದರಿಕೆ ಹಾಕಿರುವ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಸ್ಥಳೀಯ ನಿವಾಸಿ ಶಂಕರ ದೇವಾಡಿಗ ಎಂಬ ವ್ಯಕ್ತಿ ಕೃತ್ಯವೆಸಗಿರುವುದಾಗಿ ಆರೋಪಿಸಲಾಗಿದೆ.
ಶಂಕರ ದೇವಾಡಿಗ ವಿದ್ಯಾರ್ಥಿನಿಯೊಂದಿಗೆ ಕಳೆದ ಕೆಲದಿನಗಳಿಂದ ಅನ್ಯೋನ್ಯವಾಗಿದ್ದು, ಈ ವಿಚಾರ ಆಕೆಯ ತಾಯಿಗೆ ತಿಳಿದು ಆತನೊಂದಿಗೆ ಮಾತನಾಡದಂತೆ ಮಗಳಿಗೆ ಎಚ್ಚರಿಕೆ ನೀಡಿದ್ದರೆನ್ನಲಾಗಿದೆ.
ವಿದ್ಯಾರ್ಥಿನಿ ಆತನ ನಂಬರ್ ಅನ್ನು ಬ್ಲಾಕ್ ಮಾಡಿದ್ದಳು ಎನ್ನಲಾಗಿದೆ. ಇದೇ ಕಾರಣಕ್ಕೆ ಕಾಲೇಜು ಮುಗಿಸಿ ವಿದ್ಯಾರ್ಥಿನಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ನಿರ್ಜನ ಪ್ರದೇಶದಲ್ಲಿ ಕಾದು ನಿಂತಿದ್ದ ಶಂಕರ್ ದೇವಾಡಿಗ ಆಕೆಯ ಮೇಲೆ ದಾಳಿ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.
ಮೊಬೈಲ್ ಅನ್ನು ಕಸಿದುಕೊಂಡು ಅವಾಚ್ಯವಾಗಿ ನಿಂದಿಸಿ ಕಾಲಿನಿಂದ ತುಳಿದು ಹಲ್ಲೆ ನಡೆಸಿದ್ದಲ್ಲದೆ ಅಸಭ್ಯವಾಗಿ ವರ್ತಿಸಿದ್ದು, ಕೊಲ್ಲದೆ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿರುವುದಾಗಿ ವಿದ್ಯಾರ್ಥಿನಿ ವೇಣೂರು ಪೊಲೀಸರಿಗೆ ದೂರು ನೀಡಿದ್ದಾಳೆ.
ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಿಸಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.