ಮಂಗಳೂರು : ನಗರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಯಶಸ್ವಿ ಕಾರ್ಯಾಚರಣೆ ನಡೆಸಿ ನಿಷೇಧಿತ ಮಾದಕ ವಸ್ತು ಗಾಂಜಾ ಸಾಗಾಟ ಮತ್ತು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಕಾರ್ಯಾಚರಣೆ ವೇಳೆ 4 ಕೆಜಿ ಗಾಂಜಾವನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪಡೀಲ್ ಪ್ರದೇಶದಲ್ಲಿ ಅಕ್ರಮವಾಗಿ ದ್ವಿಚಕ್ರ ವಾಹನದಲ್ಲಿ ಮಾದಕ ದ್ರವ್ಯ ಸಾಗಿಸುತ್ತಿದ್ದಾಗ ಬಂಧಿಸಿದ್ದಾರೆ.
ಬಂಧಿತ ವ್ಯಕ್ತಿಯನ್ನು ಬೆಳ್ತಂಗಡಿ ತಾಲೂಕಿನ ಕುಕ್ಕೇಡಿ ಗ್ರಾಮದ ಗೋಳಿಯಂಗಡಿ ಮನೆ ನಿವಾಸಿ ಅಬುತಾಹಿರ್ ಅಲಿಯಾಸ್ ಅನ್ವರ್ (25) ಎಂದು ಗುರುತಿಸಲಾಗಿದೆ.
1 ಲಕ್ಷ ಮೌಲ್ಯದ 4 ಕೆಜಿ ಗಾಂಜಾ, ದ್ವಿಚಕ್ರ ವಾಹನ ಮತ್ತು ಮೊಬೈಲ್ ಫೋನ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಒಟ್ಟು ಸೊತ್ತುಗಳ ಅಂದಾಜು ಮೌಲ್ಯ ಸುಮಾರು 1.75 ಲಕ್ಷ ರೂ.., ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಿಸಿಬಿ ಎಸಿಪಿ ಮನೋಜ್ ಕುಮಾರ್ ನಾಯ್ಕ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಇನ್ಸ್ಪೆಕ್ಟರ್ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ ಐ ನರೇಂದ್ರ, ಎಎಸ್ ಐ ಮೋಹನ್ ಕೆವಿ, ಅಧಿಕಾರಿಗಳಾದ ರಾಮ್ ಪೂಜಾರಿ, ಸುಜನ್ ಶೆಟ್ಟಿ, ಸಿಸಿಬಿ ಸಿಬ್ಬಂದಿ ಭಾಗವಹಿಸಿದ್ದರು.