ಬೆಂಗಳೂರು : ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿದಂತೆ ಮಲೆನಾಡು ಜಿಲ್ಲೆಗಳಲ್ಲಿ ಅ.22 ರವರೆಗೆ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದ್ದು, ಉತ್ತರ ಒಳನಾಡು ಜಿಲ್ಲೆಗಳ ಒಳಗೊಂಡಂತೆ ರಾಜ್ಯದ 18 ಜಿಲ್ಲೆಗಳಲ್ಲಿ ಅ.17ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಜ್ಞ ಸಿ.ಎಸ್. ಪಾಟೀಲ್ ಮಾಹಿತಿ ನೀಡಿದ್ದಾರೆ.
ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅ. 16 ಮತ್ತು 17 ರಂದು ವ್ಯಾಪಕವಾಗಿ ಸಾಧಾರಣ ಮಳೆ, ಅಲ್ಲಲ್ಲಿ ಚದುರಿದಂತೆ ಭಾರಿ ಮಳೆ ಸಾಧ್ಯತೆ ಇದೆ. ದಕ್ಷಿಣ ಒಳನಾಡು ಪ್ರದೇಶದ ಪೂರ್ವ ಜಿಲ್ಲೆಗಳಲ್ಲೂ ಭಾರಿ ಮಳೆಯ ನಿರೀಕ್ಷೆಯಿದೆ.
ಅ.18ರ ಬಳಿಕ ಮಳೆ ಕಡಿಮೆ ಇರುವ ಸಾಧ್ಯತೆಯಿದೆ. ಎರಡು-ಮೂರು ದಿನಗಳಲ್ಲಿ ತಮಿಳುನಾಡು, ಪಾಂಡಿಚೇರಿ, ಆಂಧ್ರಪ್ರದೇಶ ಪ್ರದೇಶದಲ್ಲೂ ವಾಯುಭಾರ ಕುಸಿತ ಸಾಧ್ಯತೆಯ ಪರಿಣಾಮ ಕರಾವಳಿ, ದಕ್ಷಿಣ ಒಳನಾಡಿನಲ್ಲಿ 17ರವರೆಗೆ ವ್ಯಾಪಕ ಮಳೆಯಾಗುವ ಹೆಚ್ಚಿನ ಸಾಧ್ಯತೆ ಇದ್ದು, ಉತ್ತರ ಒಳನಾಡಿನ ಹಲವೆಡೆ ಮಳೆ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.
ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಬೆಂಗಳೂರು, ಮಂಡ್ಯ, ಮೈಸೂರು, ಚಾಮರಾಜನಗರ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ ಹಾಗೂ ಹಾವೇರಿ. ಈ ಜಿಲ್ಲೆಗಳ ಹಲವೆಡೆ ಅ. 17ರವರೆಗೆ ಭಾರಿ ಮಳೆ ಸಾಧ್ಯತೆ ಇರುವುದರಿಂದ ಈ ಜಿಲ್ಲೆಗಳಲ್ಲಿ ಅ. 17ರವರೆಗೆ ಹಳದಿ ಹಾಗೂ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಬೆಂಗಳೂರಿನಲ್ಲಿ ಅ. 17ರವರೆಗೆ ಸಾಧಾರಣದಿಂದ ಭಾರಿ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಜ್ಞ ಸಿ.ಎಸ್ ಪಾಟೀಲ್ ತಿಳಿಸಿದ್ದಾರೆ.


























