ಪುತ್ತೂರು: ಚೆಲ್ಯಡ್ಕ ಮುಳುಗು ಸೇತುವೆಯಲ್ಲಿ ಕಳೆದ ಮಳೆಗಾಲದಲ್ಲಿ ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಘನವಾಹನಗಳ ಸಂಚಾರವನ್ನು ನಿಷೇಧಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ಆದೇಶ ಮಾಡಿದ್ದರು. ಪ್ರಸ್ತುತ ಮಳೆಗಾಲ ಕಡಿಮೆಯಾಗಿದ್ದು ಸದ್ಯ ಬಸ್ ಹೊರತುಪಡಿಸಿ ಎಲ್ಲಾ ರೀತಿಯ ಲಘು ಹಾಗೂ ಘನ ವಾಹನಗಳು ಸೇತುವೆ ಮೇಲೆ ಸಂಚರಿಸುತ್ತಿವೆ.
ಜಿಲ್ಲಾಧಿಕಾರಿಗಳ ಆದೇಶ ಇರುವುದರಿಂದ ಬಸ್ ಚಾಲಕ, ಮಾಲಕರು ಈ ಸೇತುವೆ ಮೇಲೆ ಚಲಿಸಲು ಹಿಂದೇಟು ಹಾಕುತ್ತಿದ್ದಾರೆ. ಇದರಿಂದಾಗಿ ಈ ಭಾಗದ ನೂರಾರು ಮಂದಿ ಸಾರ್ವಜನಿಕರು, ವಿದ್ಯಾರ್ಥಿಗಳು ನಿತ್ಯ ಪರದಾಡುತ್ತಿದ್ದಾರೆ.
ಸಾರ್ವಜನಿಕ ಹಿತದೃಷ್ಟಿಯಿಂದ ಜಿಲ್ಲಾಧಿಕಾರಿಗಳು ಈ ಕೂಡಲೇ ಬಸ್ ಸಂಚಾರಕ್ಕೆ ಅವಕಾಶ ಕಲ್ಪಿಸಿಕೊಡಬೇಕು ಎಂದು ಆಗ್ರಹಿಸಿ ಸಾರ್ವಜನಿಕ ಹಿತರಕ್ಷಣಾ ಸಮಿತಿ ಅಜ್ಜಿಕಲ್ಲು ಇದರ ವತಿಯಿಂದ ಪುತ್ತೂರು ಸಹಾಯಕ ಆಯುಕ್ತರಿಗೆ ಅವರ ಕಛೇರಿ ಸಹಾಯಕರ ಮೂಲಕ ನ.27 ರಂದು ಮನವಿ ಸಲ್ಲಿಸಲಾಯಿತು.

ಸಹಾಯಕ ಆಯುಕ್ತರಿಗೆ, ಜಿಲ್ಲಾಧಿಕಾರಿಗಳಿಗೆ ಬಸ್ ಸಂಚರಿಸುವಂತೆ ಕ್ರಮವಹಿಸಲು ಸಾರ್ವಜನಿಕ ಹಿತರಕ್ಷಣಾ ಸಮಿತಿ ವತಿಯಿಂದ ಮನವಿ ಮಾಡಲಾಗಿದ್ದು ಡಿ.5 ರ ಒಳಗೆ ಈ ಸಮಸ್ಯೆಗೆ ಪರಿಹಾರ ಸಿಗದಿದ್ದರೆ ಸಾರ್ವಜನಿಕರೊಂದಿಗೆ ರಸ್ತೆಗಿಳಿದು ಹೋರಾಟ ಮಾಡಬೇಕಾಗುತ್ತದೆ. ಎಂದು ಸಮಿತಿಯು ಪ್ರಕಟಣೆಯಲ್ಲಿ ತಿಳಿಸಿದೆ.



























