ಬೆಂಗಳೂರು: ಮಾಜಿ ಸಿಎಂ ಎಸ್.ಎಂ ಕೃಷ್ಣ ಇಂದು ವಿಧಿವಶರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಎಸ್.ಎಂ ಕೃಷ್ಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಇವರ ಚಿಕಿತ್ಸೆ ಫಲಿಸದೇ ಸದಾಶಿವನಗರ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಇನ್ನು, ಗಣ್ಯರ ದಂಡೇ ಎಸ್.ಎಂ ಕೃಷ್ಣ ಅವರ ದರ್ಶನಕ್ಕಾಗಿ ಸದಾಶಿವನಗರದ ನಿವಾಸಕ್ಕೆ ಭೇಟಿ ನೀಡುತ್ತಿದೆ. ಈಗ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಎಸ್.ಎಂ ಕೃಷ್ಣ ಅವರ ನಿವಾಸಕ್ಕೆ ಭೇಟಿ ನೀಡಿ ದರ್ಶನ ಪಡೆದರು. ಎಸ್.ಎಂ ಕೃಷ್ಣ ಅವರ ಪಾರ್ಥಿವ ಶರೀರ ನೋಡಿ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಬಿಕ್ಕಿಬಿಕ್ಕಿ ಅತ್ತರು.
ಮಾಜಿ ಕೇಂದ್ರ ಮಾಜಿ ಸಚಿವರಾದ ಶ್ರೀ ಎಸ್.ಎಂ. ಕೃಷ್ಣ ಅವರ ಅಂತ್ಯಕ್ರಿಯೆ ನಾಳೆ ನಡೆಯಲಿದೆ. ತಮ್ಮ ತವರಾದ ಮಂಡ್ಯ ಜಿಲ್ಲೆಯ ದ್ದೂರು ತಾಲ್ಲೂಕು ಸೋಮನಹಳ್ಳಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ಆಗಲಿದೆ ಎಂದು ತಿಳಿದು ಬಂದಿದೆ.
ನಾಳೆ ಶಾಲಾ ಕಾಲೇಜುಗಳಿಗೆ ರಜೆ
ಎಸ್.ಎಂ ಕೃಷ್ಣ ನಿಧನರಾಗಿದ್ದು, ನಾಳೆ ರಾಜ್ಯಾದ್ಯಂತ ಎಲ್ಲಾ ಶಾಲಾ ಕಾಲೇಜುಗಳಿಗೆ ಹಾಗೂ ಸರ್ಕಾರಿ ಕಚೇರಿಗಳಿಗೆ ಸಾರ್ವತ್ರಿಕ ರಜೆ ಘೋಷಿಸಿದೆ. ಮೂರು ದಿನಗಳ ಕಾಲ ರಾಜ್ಯಾದ್ಯಂತ ಶೋಕಾಚರಣೆಯನ್ನು ಆಚರಿಸಲಾಗುವುದು. ಈ ಅವಧಿಯಲ್ಲಿ ಯಾವುದೇ ಅಧಿಕೃತ ಮನೋರಂಜನಾ ಕಾರ್ಯಕ್ರಮಗಳು ಇರುವುದಿಲ್ಲ. ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೂ ರಾಷ್ಟ್ರಧ್ವಜವನ್ನು ಅರ್ಧಮಟ್ಟದಲ್ಲಿ ಹಾರಿಸಲಾಗುವುದು.