ಕೊಡಗು: ಮಂಡ್ಯ ಶಾಸಕ ರವಿ ಗಣಿಗ ಅವರು ನೇರವಾಗೇ ರಶ್ಮಿಕಾ ಮಂದಣ್ಣ ಅವರನ್ನ ಟಾರ್ಗೆಟ್ ಮಾಡಿ ಆಕ್ರೋಶ ಹೊರ ಹಾಕಿದ್ದರು. ಕನ್ನಡದ ಕಿರಿಕ್ ಪಾರ್ಟಿ ಸಿನಿಮಾದಿಂದ ಬೆಳೆದ ರಶ್ಮಿಕಾ ಮಂದಣ್ಣ ಅವರು ಕನ್ನಡ ಚಿತ್ರರಂಗದ ಯಾವುದೇ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿಲ್ಲ ಅನ್ನೋದು ಕಾಂಗ್ರೆಸ್ ಶಾಸಕ ರವಿ ಗಣಿಗ ಅವರ ಆಕ್ಷೇಪ ಮತ್ತು ಆಕ್ರೋಶಕ್ಕೆ ಕಾರಣವಾಗಿತ್ತು. ಶಾಸಕ ರವಿ ಗಣಿಗ ಅವರ ಈ ನೇರ ನುಡಿ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಅವರ ನಟ್ಟು, ಬೋಲ್ಟ್ ಟೈಟ್ ಮಾಡುವ ಹೇಳಿಕೆಗಳು ಇಡೀ ದೇಶಾದ್ಯಂತ ಸಂಚಲನ ಸೃಷ್ಟಿಸಿದೆ.
ಕೊಡವ ಸಮುದಾಯದ ಸಮರ!
ಚಲನಚಿತ್ರ ಕಲಾವಿದರ ಮೇಲೆ ನೀಡಿದ ಈ ಹೇಳಿಕೆಗಳು ಸಂಚಲನ ಸೃಷ್ಟಿಸಿದ್ದು, ನಟಿ ರಶ್ಮಿಕಾ ಮಂದಣ್ಣಗೆ ಬೆದರಿಕೆ ಹಾಕಲಾಗುತ್ತಿದೆ ಎಂದು ಸಿಟ್ಟಿಗೆದ್ದಿರುವ ಕೊಡವ ಸಮುದಾಯದ ಮುಖಂಡರು ಕಾಂಗ್ರೆಸ್ ನಾಯಕರ ಹೇಳಿಕೆಯನ್ನು ಖಂಡಿಸಿದ್ದಾರೆ. ಅಷ್ಟೇ ಅಲ್ಲ ನಮ್ಮ ಸಮುದಾಯದ ಹೆಣ್ಣುಮಗಳಿಗೆ ಸೂಕ್ತ ಭದ್ರತೆ ಒದಗಿಸಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ರಾಜ್ಯ ಗೃಹ ಸಚಿವ ಜಿ.ಪರಮೇಶ್ವರ್ ಅವರಿಗೂ ಪತ್ರ ಬರೆದಿದ್ದಾರೆ. ರಶ್ಮಿಕಾ ಮಂದಣ್ಣ ಅವರಿಗೆ ಸೂಕ್ತ ಭದ್ರತೆ ನೀಡುವಂತೆ ಕೊಡವ ಸಮುದಾಯ ಆಗ್ರಹಿಸಿದೆ.
ಗೃಹ ಸಚಿವರಿಗೆ ಬರೆದ ಪತ್ರದಲ್ಲೇನಿದೆ?
ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು ನಾಚಪ್ಪ ಅವರು ರಶ್ಮಿಕಾ ಮಂದಣ್ಣ ಅವರಿಗೆ ಭದ್ರತೆ ನೀಡುವಂತೆ ಪತ್ರದ ಮೂಲಕ ಒತ್ತಾಯಿಸಿದ್ದಾರೆ. ನಮ್ಮ ಕೊಡಗು ಮೂಲದ ರಶ್ಮಿಕಾ ಮಂದಣ್ಣ ಅವರಿಗೆ ಸರ್ಕಾರ ಸೂಕ್ತ ರಕ್ಷಣೆಯನ್ನು ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ರಶ್ಮಿಕಾ ಮಂದಣ್ಣ ಅವರು ನಮ್ಮ ಕೊಡವ ಬುಡಕಟ್ಟು ಜನಾಂಗಕ್ಕೆ ಸೇರಿದವರು. ತಮ್ಮ ಕಠಿಣ ಪರಿಶ್ರಮ ಮತ್ತು ಪ್ರತಿಭೆ ಮೂಲಕ ಅವರು ಇಂದು ಭಾರತೀಯ ಚಿತ್ರರಂಗದಲ್ಲಿ ಯಶಸ್ಸು ಕಂಡಿದ್ದಾರೆ. ಆದರೆ, ನಟಿಯ ಜನಪ್ರಿಯತೆ ಹಾಗೂ ಕಲಾಪ್ರತಿಭೆಯನ್ನ ತಿಳಿಯದ ಕೆಲವರು ವಿನಾಕಾರಣ ಟೀಕೆ ಮಾಡುವ ಮೂಲಕ ಅವರಿಗೆ ಮಾನಸಿಕ ಕಿರುಕುಳ ನೀಡಿದ್ದಾರೆ. ಇದು ಘೋರ ಮಾತ್ರವಲ್ಲದೆ ಬೆದರಿಕೆಗೆ ಸಮ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ರಶ್ಮಿಕಾ ಮಂದಣ್ಣ ಭಾರತೀಯ ಚಲನಚಿತ್ರರಂಗಕ್ಕೆ ಸಿಕ್ಕಿರುವ ಅಪೂರ್ವ ಕೊಡುಗೆ. ಅವರು ಶ್ರೇಷ್ಠ ನಟಿ ಎನ್ನುವುದರಲ್ಲಿ ಎರಡು ಮಾತಿಲ್ಲ. ನಟಿ ಸ್ವಂತ ನಿರ್ಧಾರ ಹಾಗೂ ಆಕೆಯ ಆಯ್ಕೆಗಳ ಸ್ವಾತಂತ್ರ್ಯದ ಹಕ್ಕನ್ನು ನಾವೆಲ್ಲರೂ ಗೌರವಿಸಬೇಕು. ಅದನ್ನು ಬಿಟ್ಟು ಯಾರೋ ಒಬ್ಬರ ಸೂಚನೆಯಂತೆ, ನಿರೀಕ್ಷೆಯಂತೆ ಇರಬೇಕು ಎಂದು ಒತ್ತಡ ಹೇರಬಾರದು. ಇದು ರಶ್ಮಿಕಾ ಅವರು ಕೊಡವ ಸಮಾಜಕ್ಕೆ ಸೇರಿರುವ ಕಾರಣದಿಂದಲೇ ಹೀಗೆಲ್ಲ ನಡೆದುಕೊಳ್ಳುತ್ತಿದ್ದಾರೆ ಎಂಬ ಅರ್ಥ ಬರುತ್ತದೆ ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು ನಾಚಪ್ಪ ಹೇಳಿದ್ದಾರೆ.